ADVERTISEMENT

ಸಾಧನೆಗೆ ನಿರ್ದಿಷ್ಟ ಗುರಿ–ಗುರು ಮುಖ್ಯ: ಸಚಿವ ಬೈರತಿ ಬಸವರಾಜ

ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 2:56 IST
Last Updated 6 ಸೆಪ್ಟೆಂಬರ್ 2020, 2:56 IST
ದಾವಣಗೆರೆಯಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ದಾವಣಗೆರೆಯಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು.   

ದಾವಣಗೆರೆ: ಯಾವುದೇ ವಿದ್ಯಾರ್ಥಿ ಗುರಿ ಸಾಧಿಸಬೇಕಾದರೆ ಗುರು ಇರಬೇಕು. ವಿದ್ಯಾರ್ಥಿಗಳಿಗೆ ರಾಮಬಾಣ ದಂತೆ ಒಂದು ನಿರ್ದಿಷ್ಟ ಗುರಿ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಸಲಹೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯ ಅಂಗವಾಗಿಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಶನಿವಾರ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ ಪುರಸ್ಕೃತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣ ಹಾಗೂ ಅರಿವು ಮೂಡಿಸು ವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ಮಕ್ಕಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಹಿಂದೆ ಗುರು, ಮುಂದೆ ಗುರಿ ಇರಬೇಕು. ಆಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ಒಬ್ಬ ವ್ಯಕ್ತಿಯ ಜೀವನದಲ್ಲಿ ತಂದೆ, ತಾಯಿ ಹಾಗೂ ಗುರುಗಳು ಮುಖ್ಯವಾಗುತ್ತಾರೆ. ವ್ಯಕ್ತಿತ್ವ ರೂಪಿಸುವಲ್ಲಿ ಗುರುವಿನ ಪಾತ್ರ ಹೆಚ್ಚು’ ಎಂದರು.

ADVERTISEMENT

‘ದೇಶವು ಪ್ರಗತಿಯತ್ತ ಸಾಗಲು ಶಿಕ್ಷಕರೇ ಕಾರಣರು. ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ ಹಾಗೂ ಅರಿವುಗಳನ್ನು ಬೆಳೆಸುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಆ ಮೂಲಕ ತಮ್ಮ ಕಾರ್ಯವನ್ನು ಶ್ರದ್ಧೆಯಿಂದ ನಿರ್ವಹಿಸಬೇಕು’ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ‘ಶಿಲ್ಪಿ ಒಂದು ಕಲ್ಲನ್ನು ಕೆತ್ತಿ ಮೂರ್ತಿಯಾಗಿ ರೂಪಿಸುತ್ತಾನೆ. ಅದು ಗರ್ಭಗುಡಿಯೊಳಗೆ ದೇವರಾಗುತ್ತದೆ. ಅದೇ ರೀತಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಿದ್ದಿ ಸಮಾಜದಲ್ಲಿ ಉನ್ನತ ವ್ಯಕ್ತಿ ಯಾಗಲು ಮಾರ್ಗದರ್ಶನವೆಂಬ ರೂಪ ನೀಡಬೇಕು’ ಎಂದು ಸಲಹೆ ನೀಡಿದರು.

‘ಸರ್ವಪಲ್ಲಿ ರಾಧಾಕೃಷ್ಣನ್‍ ಅವರು ಶಿಕ್ಷಕರಾಗಿ ರಾಷ್ಟ್ರಪತಿ ಹುದ್ದೆ ಅಲಂಕರಿಸಿದರು. ಅವರಂತೆ ಅಬ್ದುಲ್ ಕಲಾಂ, ಲಾಲ್ ಬಹದ್ದೂರ್ ಶಾಸ್ತ್ರಿಯವರು ಸಾಮಾನ್ಯ ಕುಟುಂಬದಲ್ಲಿ ಬೆಳೆದು ದೇಶಕ್ಕೆ ಹೆಸರು ತಂದುಕೊಟ್ಟರು. ಅದೇ ರೀತಿ ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದ ಸಾಮಾನ್ಯ ವ್ಯಕ್ತಿ ಇಂದು ಪ್ರಧಾನಿಯಾಗಿದ್ದಾರೆ. ಇವರು ಈ ಹುದ್ದೆಗಳನ್ನು ಅಲಂಕರಿಸಲು ಅವರಿಗೆ ಶಿಕ್ಷಣ ನೀಡಿ ಒಳ್ಳೆಯ ಮಾರ್ಗ ತೋರಿಸಿದ ಗುರುಗಳೇ ಕಾರಣ’ ಎಂದು ಶಿಕ್ಷಕರನ್ನು ಶ್ಲಾಘಿಸಿದರು.

ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ ಮಾತನಾಡಿ, ‘ಶಿಕ್ಷಕ ವೃತ್ತಿ ಬಹಳ ಶ್ರೇಷ್ಠ. ನಾನೂ ಒಬ್ಬ ಶಿಕ್ಷಕ. ಸಮಾಜವು ಇಂದು ಬದಲಾವಣೆ ಆಗಬೇಕಾದರೆ ಶಿಕ್ಷಕನ ಪಾತ್ರ ಅತಿ ಮುಖ್ಯವಾಗಿದೆ. ಯಾವುದೇ ಬೇಧ ವಿಲ್ಲದೆ, ರಾಜಕೀಯ ಒತ್ತಡಕ್ಕೆ ಮಣಿಯದೆ ಎಲ್ಲ ವಿದ್ಯಾರ್ಥಿಗಳನ್ನು ತಿದ್ದುವ ಕೆಲಸ ಶಿಕ್ಷಕರು ಮಾಡಬೇಕು’ ಎಂದರು.

ಸಮಾರಂಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರವನ್ನು ಅನಾವರಣ ಗೊಳಿಸಿದರು. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 23 ಶಿಕ್ಷಕರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್, ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ, ಸದಸ್ಯ ಕೆ.ಎಸ್. ಬಸವಂತಪ್ಪ, ಪಾಲಿಕೆ ಸದಸ್ಯೆ ರೇಖಾ ಸುರೇಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ರಾಜೀವ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಗಿರೀಶ್ ಹಾಜರಿದ್ದರು. ಡಿಡಿಪಿಐ ಆರ್. ಪರಮೇಶ್ವರಪ್ಪ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.