ADVERTISEMENT

ಅತಿಥಿ ಉಪನ್ಯಾಸಕರ ರಾಜ್ಯಮಟ್ಟದ ಸಮಾವೇಶ ಏ. 2ಕ್ಕೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2019, 13:54 IST
Last Updated 28 ಮಾರ್ಚ್ 2019, 13:54 IST

ದಾವಣಗೆರೆ: ಪಿಂಚಣಿ, ರಜೆ, ವೇತನ ಹೆಚ್ಚಳ, ನೇಮಕಾತಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಅತಿಥಿ ಉಪನ್ಯಾಸಕರ ಸಮಾವೇಶವನ್ನು ಏ. 2ರಂದು ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ಎಚ್. ಕೊಟ್ರೇಶ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ 412 ಸರ್ಕಾರಿ ಪದವಿ ಕಾಲೇಜುಗಳಲ್ಲಿ 13,500 ಮಂದಿ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ವರ್ಷದಲ್ಲಿ 9ರಿಂದ 10 ತಿಂಗಳು ಮಾತ್ರ ಗೌರವಧನ ನೀಡುತ್ತಿದ್ದಾರೆ. ಅದನ್ನೂ ಸಮರ್ಪಕವಾಗಿ ನೀಡುತ್ತಿಲ್ಲ. ಮೂರ್ನಾಲ್ಕು ತಿಂಗಳಿಗೊಮ್ಮೆ ವೇತನ ಬರುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ಪದವಿ ಕಾಲೇಜುಗಳಲ್ಲಿ ಶೇ 75ರಷ್ಟುಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲೆಯ 11 ಕಾಲೇಜುಗಳಲ್ಲಿ 516ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಉಪನ್ಯಾಸಕ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಜಿಲ್ಲೆಯ ಎಲ್ಲಾ ಅತಿಥಿ ಉಪನ್ಯಾಸಕರು ಅಂದು ತರಗತಿ ಬಹಿಷ್ಕರಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ಡಾ.ಎಂ. ಪ್ರಭಾಕರ್, ಅತಿಥಿ ಉಪನ್ಯಾಸಕರಾದ ಪಿ.ಮಂಜಮ್ಮ, ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.