ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ ಪ್ರಕರಣದಲ್ಲಿ ಪೊಲೀಸರು ಶನಿವಾರ ರಾತ್ರಿ 25 ಮಂದಿಯನ್ನು ಬಂಧಿಸಿದ್ದಾರೆ.
‘ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಮೊಬೈಲ್‌ಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರು ಚನ್ನಗಿರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು. ಆರೋಪಿಗಳ ಬಂಧನಕ್ಕಾಗಿ ಒಟ್ಟು 5 ತಂಡಗಳನ್ನು ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ಪೊಲೀಸ್ ಠಾಣೆಗೆ ಕರೆ ದೊಯ್ದಿದ್ದಾಗಲೇ ಆದಿಲ್ ಎಂಬವರು ಮೃತಪಟ್ಟಿದ್ದರು. ಆದಿಲ್ ಅವರದ್ದು ಲಾಕಪ್ ಡೆತ್ ಎಂದು ಆರೋಪಿಸಿ ಉದ್ರಿಕ್ತರ ಗುಂಪು ಶುಕ್ರವಾರ ತಡರಾತ್ರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿತ್ತು. ಮುಂಜಾಗ್ರತಾ ಕ್ರಮವಾಗಿ ಚನ್ನಗಿರಿಯಲ್ಲಿ ಭಾನುವಾರವೂ ಪೊಲೀಸರ ಬಿಗಿ ಭದ್ರತೆ
ಮುಂದುವರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.