ADVERTISEMENT

ಮಾರ್ಗಸೂಚಿ ಕಟ್ಟುನಿಟ್ಟಿನ ಅನುಷ್ಠಾನಗೊಳಿಸಿ: ಸಂಸದ ಜಿ.ಎಂ. ಸಿದ್ದೇಶ್ವರ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 3:07 IST
Last Updated 30 ಏಪ್ರಿಲ್ 2021, 3:07 IST
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಸಂಸದ ಜಿ.ಎಂ. ಸಿದ್ದೇಶ್ವರ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಸಂಸದ ಜಿ.ಎಂ. ಸಿದ್ದೇಶ್ವರ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.   

ದಾವಣಗೆರೆ: ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಜಾರಿಗೊಳಿಸಿರುವ ಲಾಕ್‍ಡೌನ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯನ್ನಾಗಿಸ‌ಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.

ನಗರದಲ್ಲಿ ಕಾರಣವಿಲ್ಲದೇ ಅಡ್ಡಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ. ಸಕಾರಣದಿಂದ ರಸ್ತೆಗಿಳಿಯುವವರಿಗೆ ತೊಂದರೆ ಕೊಡಬೇಡಿ ಎಂದು ಸೂಚಿಸಿದರು.

ADVERTISEMENT

ಹೋಂ ಐಸೋಲೇಷನ್‌ನಲ್ಲಿರುವವರು ಮನೆಯಿಂದ ಹೊರಬಾರದಂತೆ ನಿಗಾ ವಹಿಸಬೇಕು. ಅವರ ಮನೆಯ ಮುಂದೆ ಒಂದು ಚಾರ್ಟ್ ಅಂಟಿಸಿ ಅಲ್ಲಿಗೆ ಭೇಟಿ ನೀಡುವ ಆಶಾಕಾರ್ಯಕರ್ತೆಯರು ಹಾಗೂ ವೈದ್ಯರು ಅದರ ಮೇಲೆ ಸಹಿ ಮಾಡಿಬರಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಗೆ ಅಗತ್ಯ ಇರುವಷ್ಟು ರೆಮ್‌ಡಿಸಿವಿರ್‌ ದಾಸ್ತಾನು ಇದೆ. ಅಗತ್ಯ ಇರುವವರಿಗೆ ಬಳಸಲಾಗುತ್ತದೆ. ಕೋವಿಡ್‌ ಲಸಿಕೆಗೆ ಬೇಡಿಕೆ ಹೆಚ್ಚಾಗಿರುವುದರಿಂದ ಪೂರೈಕೆಯಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

ಸಿಜಿ ಆಸ್ಪತ್ರೆ ಬಳಿ ಆಕ್ಸಿಜನ್ ಘಟಕ ನಿರ್ಮಾಣ ಮಾಡಿರುವುದರಿಂದ ನಮಗೆ ಈಗ ಯಾವುದೇ ತೊಂದರೆ ಇಲ್ಲ. ಕೆಲವರು ಕೃತಕ ಕೊರತೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಾಜಿ ಮೇಯರ್‌ ಬಿ.ಜಿ. ಅಜಯ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.