ADVERTISEMENT

ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಲಾಕ್‍ಡೌನ್: ಸಿ.ಬಿ. ರಿಷ್ಯಂತ್

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 15:09 IST
Last Updated 11 ಜೂನ್ 2021, 15:09 IST
ಸಿ.ಬಿ. ರಿಷ್ಯಂತ್ 
ಸಿ.ಬಿ. ರಿಷ್ಯಂತ್    

ದಾವಣಗೆರೆ: ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆದ್ಯತೆ ನೀಡಲಾಗುವುದು. ಗ್ರಾಮೀಣ ಭಾಗಗಳಲ್ಲಿ ಸಂಚರಿಸಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಸಿ.ಬಿ. ರಿಷ್ಯಂತ್ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಮೊದಲ ಬಾರಿಗೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಲಾಕ್‌ಡೌನ್ ಪರಿಣಾಮಕಾರಿಯಾಗಿ ಜಾರಿಯಾಗದ ಹೊರತು ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುವುದಿಲ್ಲ. ಕೋವಿಡ್ ಮಾರ್ಗಸೂಚಿಗಳ ಪಾಲನೆಗೆ ಪ್ರಥಮ ಆದ್ಯತೆ ನೀಡಲಾಗುವುದು. ನಿಷೇಧಿತ ಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

‘ನಗರದಲ್ಲಿ ಎಲ್ಲೆಲ್ಲಿ ಯಾವ ಯಾವ ಸಮಸ್ಯೆಗಳಿವೆ ಎಂಬುದರ ಬಗ್ಗೆ ಮಾಹಿತಿ ಮತ್ತು ದಾಖಲೆಗಳನ್ನು ಪಡೆದುಕೊಂಡು ನಂತರ ಅದಕ್ಕೆ ತಕ್ಕ ಕ್ರಮಗಳನ್ನು ಜರುಗಿಸುವ ಕೆಲಸ ಮಾಡಲಾಗುವುದು. ಕೆಲ ವ್ಯಾಪಾರಿಗಳು ಕೋವಿಡ್‌ ಮಾರ್ಗಸೂಚಿಯನ್ನು ಉಲ್ಲಂಘಿಸಿ ಅಂಗಡಿಗಳ ಬಾಗಿಲು ತೆರೆಯುತ್ತಿರುವುದರ ಬಗ್ಗೆ ದೂರುಗಳು ಇದ್ದು, ಸೂಕ್ತ ಕ್ರಮಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಿಯಮ ಉಲ್ಲಂಘಿಸಿದ ವಾಹನಗಳ ಜಪ್ತಿ, ದಂಡ ವಿಧಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ADVERTISEMENT

ಸಮನ್ವಯದಿಂದ ಕೆಲಸ

‘ಕೋವಿಡ್ ನಿಯಂತ್ರಣಕ್ಕಾಗಿ ಕಂದಾಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರ ಪಡೆದು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲಾಗುವುದು. ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿ ಒಂದು ತಂಡದ ರೀತಿ ಕಾರ್ಯ ನಿರ್ವಹಿಸಿ, ಕೋವಿಡ್ ನಿಯಂತ್ರಣ, ಹಾಗೂ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ಶ್ರಮಿಸಲಾಗುವುದು’ ಎಂದು ಹೇಳಿದರು.

112ಗೆ ಕರೆ ಮಾಡಿ

‘ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಹಾಯವಾಣಿಗೆ ಕರೆ ಮಾಡಿ, ನೆರವು ಪಡೆಯಬಹುದು. ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳು ಸಾಮಾನ್ಯ ವ್ಯಕ್ತಿಗೂ ಸಮರ್ಪಕವಾಗಿ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ. ಸಾಮಾನ್ಯ ಜನರ ದೂರಿಗೆ ಸ್ಪಂದಿಸದ ಇಲಾಖೆಯ ಯಾವುದೇ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ’ ಎಂದು ಎಚ್ಚರಿಸಿದರು.

ಅಕ್ರಮ ಚಟುವಟಿಕೆಗೆ ಕ್ರಮ

‘ಅಕ್ರಮ ಮರಳು ದಂಧೆ, ಮದ್ಯ ಮಾರಾಟ, ಜೂಜಾಟ ಮುಂತಾದ ಅಕ್ರಮ ಚಟುವಟಿಕೆಯನ್ನು ಮಟ್ಟ ಹಾಕಲು ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ ಭಾಗಿಯಾಗಿದ್ದಲ್ಲಿ ಅಂತಹವರ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುವುದು. ಲಾಕ್‍ಡೌನ್ ಸಡಿಲಗೊಂಡ ಬಳಿಕ, ಕಾನೂನು ಸುವ್ಯವಸ್ಥೆ ಪಾಲನೆಗೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.

ಚೆಕ್‌ಪೋಸ್ಟ್‌ಗಳು ಇನ್ನಷ್ಟು ಬಿಗಿ

‘ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಾಮಕಾವಸ್ತೆಯಾಗಿದ್ದು, ಕಡಿಮೆ ಸಿಬ್ಬಂದಿ ಇರುವುದರಿಂದ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಸಿಬ್ಬಂದಿಯನ್ನು ಹೆಚ್ಚಿಸಿಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಇನ್ನೆರಡು ದಿನಗಳಲ್ಲಿ ಗ್ರಾಮೀಣ ಪ್ರದೇಶಗಳ ಚೆಕ್‌ಪೋಸ್ಟ್‌ಗಳನ್ನು ಪರಿಶೀಲಿಸಲಾಗುವುದು’ ಎಂದು ಹೇಳಿದರು.

‘ಈ ಹಿಂದೆ ದಾವಣಗೆರೆಯಲ್ಲಿ ಕಾರ್ಯ ನಿರ್ವಹಿಸಿದ್ದ ಎಸ್ಪಿ ಆರ್. ಚೇತನ್‌ ಅವರಿಂದ ಸಲಹೆ ಪಡೆದಿದ್ದೇನೆ. ಅಲ್ಲದೇ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ನ್ಯಾಯಾಧೀಶರು ಹಾಗೂ ಜನಪ್ರತಿನಿಧಿಗಳನ್ನು ಭೇಟಿಯಾಗಿ ಮಾತನಾಡಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.