ಜಗಳೂರು: ಚಿತ್ರದುರ್ಗದ ಸಮೀಪ ವಿದ್ಯಾರ್ಥಿನಿಯನ್ನು ದಾರುಣವಾಗಿ ಕೊಲೆ ಮಾಡಿರುವ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ, ಡಿಎಸ್‌ಎಸ್ ಮತ್ತು ವಾಸುದೇವ ಮೇಟಿ ಬಣದ ರೈತ ಸಂಘಟನೆಯ ನೇತೃತ್ವದಲ್ಲಿ ಪಟ್ಟಣದಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಕಾರರು ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ತಳ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಅಮಾನುಷವಾಗಿ ಕೊಲೆ ಮಾಡಲಾಗಿದೆ. ಘಟನೆಯಿಂದ ರಾಜ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಘಟನೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಕೂಡಲೇ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯತ್ತಿದ್ದು, ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ದಲಿತ ಸಂಘಟನೆಯ ತಾಲ್ಲೂಕು ಘಟಕದ ಸಂಚಾಲಕ ಮಲೆಮಾಚಿಕೆರೆ ಸತೀಶ್ ಆಗ್ರಹಿಸಿದರು.
ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕುಮಾರ್, ಎಸ್‌ಎಫ್‌ಐ ಸಂಘಟನೆಯ ತಾಲ್ಲೂಕು ಘಟಕದ ಸಂಚಾಲಕ ಆನಂತ್, ಮುಖಂಡರಾದ ಓಬಳೇಶ್, ಸತ್ಯಮೂರ್ತಿ, ಅಸಗೋಡು ಶಿವು, ಸುಜಾತಾ, ಚೌಡಮ್ಮ ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.