
ದಾವಣಗೆರೆ: ಭತ್ತ ಮತ್ತು ಮೆಕ್ಕೆಜೋಳಕ್ಕೆ ಖರೀದಿ ಕೇಂದ್ರ ತೆರೆದು ತೆಲಂಗಾಣ ಮಾದರಿಯಂತೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ಜಿಲ್ಲಾ ರೈತ ಒಕ್ಕೂಟ ಕರೆನೀಡಿರುವ ಹೊನ್ನಾಳಿ, ನ್ಯಾಮತಿ ತಾಲ್ಲೂಕು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅವಳಿ ತಾಲ್ಲೂಕು ಕೇಂದ್ರಗಳಲ್ಲಿ ಅಂಗಡಿಗಳು ಬಾಗಿಲು ಮುಚ್ಚಿದ್ದು, ಸಾರಿಗೆ ಸಂಪರ್ಕ ಬಹುತೇಕ ಸ್ಥಗಿತಗೊಂಡಿದೆ. ಸರ್ಕಾರಿ ಕಚೇರಿ, ಶಾಲೆ–ಕಾಲೇಜುಗಳು ಎಂದಿನಂತೆ ತೆರೆದಿವೆ. ವಾಹನ, ಜನಸಂಚಾರ ವಿರಳವಾಗಿದೆ. ಬಲವಂತದಿಂದ ಅಂಗಡಿ ಬಾಗಿಲು ಮುಚ್ಚಿಸಲು ಮುಂದಾದ ಪ್ರತಿಭಟನಕಾರರನ್ನು ಪೊಲೀಸರು ತಡೆದಿದ್ದು, ಅಲ್ಲಲ್ಲಿ ವಾಗ್ವಾದಗಳು ಉಂಟಾಗಿವೆ.
ನಸುಕಿನಲ್ಲಿ ಬೀದಿಗೆ ಇಳಿದ ಬಿಜೆಪಿ ಕಾರ್ಯಕರ್ತರು ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದರು. ರಸ್ತೆಗಳಲ್ಲಿ ಟೈರುಗಳಿಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನ ಪ್ರಮುಖ ಗ್ರಾಮಗಳಲ್ಲಿ ಬಂದ್‌ಗೆ ರೈತರು ಕೈಜೋಡಿಸಿದರು.
ಕೇಂದ್ರ ಸರ್ಕಾರ ಕ್ವಿಂಟಲ್ ಮೆಕ್ಕೆಜೋಳಕ್ಕೆ ₹ 2,400 ಬೆಂಬಲ ಬೆಲೆ ನಿಗದಿಪಡಿಸಿದೆ. ಆದರೆ, ರಾಜ್ಯದಲ್ಲಿ ಕ್ವಿಂಟಲ್ ಮೆಕ್ಕೆಜೋಳ ₹ 1,600ಕ್ಕಿಂತ ಕಡಿಮೆ ಬೆಲೆಗೆ ಖರೀದಿಯಾಗುತ್ತಿದೆ. ಮೆಕ್ಕೆಜೋಳಕ್ಕೆ ಖರೀದಿ ಕೇಂದ್ರ ತೆರೆದು ನ್ಯಾಯಯುತ ಬೆಲೆ ಘೋಷಣೆ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ತೆಲಂಗಾಣದಲ್ಲಿ ಕ್ವಿಂಟಲ್ ಭತ್ತಕ್ಕೆ ₹ 500 ಬೋನಸ್ ನೀಡಲಾಗುತ್ತಿದೆ. ಭತ್ತಕ್ಕೆ ನಿಗದಿಪಡಿಸಿದ ₹ 2,389 ಬೆಂಬಲ ಬೆಲೆ ಜೊತೆಗೆ ₹ 1,000 ಬೋನಸ್ ನೀಡಬೇಕು ಎಂದು ಆಗ್ರಹಿಸಿದರು.
ಹೊನ್ನಾಳಿ ಪಟ್ಟಣದ ಟಿಬಿ ವೃತ್ತದ ಬಳಿ ಬಂದ್ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ಈ ವೇಳೆ ಕಾಂಗ್ರೆಸ್ ಶಾಸಕ ಡಿ.ಜಿ. ಶಾಂತನಗೌಡ ಹಾಗೂ ಬಿಜೆಪಿಯ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನಡುವೆ ವಾಗ್ವಾದ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.