ADVERTISEMENT

ವಾರ್ಡ್, ಬೂತ್ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ಸಮಿತಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 17:11 IST
Last Updated 6 ಜುಲೈ 2020, 17:11 IST
ಮಹಾಂತೇಶ ಬೀಳಗಿ
ಮಹಾಂತೇಶ ಬೀಳಗಿ   

ದಾವಣಗೆರೆ: ಕೋವಿಡ್–19 ನಿಯಂತ್ರಣ ಕ್ರಮಗಳನ್ನು ಅನುಸರಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ ಮತ್ತು ಬೂತ್ ಮಟ್ಟದಲ್ಲಿ ಅಲ್ಲಿನ ಸ್ಥಳೀಯ ನಾಗರಿಕರು, ಜನಪ್ರತಿನಿಧಿಗಳು, ವೈದ್ಯರು, ಪೊಲೀಸರು, ವಕೀಲರು, ಅಧಿಕಾರಿಗಳು, ನೌಕರರು, ಎನ್‌ಜಿಒಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್ ಸಮಿತಿಯನ್ನು ಜುಲೈ 9ರ ಒಳಗೆ ರಚಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ ವೈದ್ಯಕೀಯ ಸಚಿವರೊಂದಿಗೆ ವಿಡಿಯೊ ಕಾನ್ಫರೆನ್ಸ್ ಮುಗಿದ ಬಳಿಕ ಅವರು ಅಧಿಕಾರಿಗಳ ಜತೆ ಸಭೆ ನಡೆಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ 45 ವಾರ್ಡುಗಳು ಮತ್ತು 375 ಬೂತ್‌ಗಳಿವೆ. ಜಿಲ್ಲೆಯಲ್ಲಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕೂಡಾ ಇದೇ ರೀತಿಯ ಸಮಿತಿಗಳನ್ನು ರಚಿಸಬೇಕು. ಜುಲೈ 10 ಮತ್ತು 11ರಂದು ಅವರಿಗೆ ತರಬೇತಿ ನೀಡಬೇಕು. ಜುಲೈ 15ರಿಂದ ಈ ಟಾಸ್ಕ್‌ಫೋರ್ಸ್ ಸಮಿತಿಗಳು ಕೆಲಸ ಮಾಡಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈಗಾಗಲೇ ಟಾಸ್ಕ್‌ಫೋರ್ಸ್ ಸಮಿತಿಗಳನ್ನು ರಚಿಸಲಾಗಿದೆ. ಅವರು ಸಕ್ರಿಯರಾಗಬೇಕು ಎಂದು ತಿಳಿಸಿದರು.

ADVERTISEMENT

ಪ್ರತಿ 10 ವಾರ್ಡುಗಳಿಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗುವುದು. ಈ ಸಮಿತಿಗಳು ಸ್ಥಳೀಯವಾಗಿ ಕೋವಿಡ್ ನಿಯಂತ್ರಣ ಮಾಡಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಂಡು ಜಾಗೃತಿ ಮೂಡಿಸುವ, ಉತ್ತಮ ಸಂದೇಶ ನೀಡುವ ಕೆಲಸ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ, ಎಡಿಸಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಎಸಿ ಮಮತಾ ಹೊಸಗೌಡರ್, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.