ADVERTISEMENT

ಶಿಕ್ಷಕರ ಸಮಸ್ಯೆ: ಸಿಎಂ. ಸಚಿವರೊಂದಿಗೆ ಚರ್ಚೆ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 4:12 IST
Last Updated 31 ಜನವರಿ 2021, 4:12 IST
ದಾವಣಗೆರೆಯ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಶೈಕ್ಷಣಿಕ ಕಾರ್ಯಾಗಾರ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಿದರು.
ದಾವಣಗೆರೆಯ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಶೈಕ್ಷಣಿಕ ಕಾರ್ಯಾಗಾರ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಉದ್ಘಾಟಿಸಿದರು.   

ದಾವಣಗೆರೆ: ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ಸೇರಿ ಶಿಕ್ಷಕರ ಸಮಸ್ಯೆಗಳ ನಿವಾರಣೆ ಸಂಬಂಧ ಶಿಕ್ಷಣ ಸಚಿವರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಶೈಕ್ಷಣಿಕ ಕಾರ್ಯಾಗಾರ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ, ಶಿಕ್ಷಕರ ಮನವಿಗೆ ಪ್ರತಿಕ್ರಿಯಿಸಿದರು.

‘1.60 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ಶಿಕ್ಷಕರ ಪೈಕಿ 80 ಸಾವಿರಕ್ಕೂ ಹೆಚ್ಚು ಮಂದಿ ಪದವೀಧರರೇ ಇದ್ದಾರೆ. ಇವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿಯೇ ಉಳಿದಿದ್ದು, ಸೇವಾ ಆಧಾರದ ಮೇಲೆ ಬಡ್ತಿ ನೀಡುವುದು ಸದ್ಯಕ್ಕೆ ನಿಂತಿದೆ. ಸದ್ಯಕ್ಕೆ ವರ್ಗಾವಣೆಗೆ ಸರ್ಕಾರವು ಆದ್ಯತೆ ನೀಡಿದ್ದು, ಈ ವಿಚಾರವಾಗಿ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ಈ ಕಾರಣದಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಲಾಗುತ್ತಿಲ್ಲ’ ಎಂದು ಹೇಳಿದರು.

ADVERTISEMENT

‘ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ, ವಾಸ್ತವದ ಬಗ್ಗೆ ಮನವರಿಕೆ ಮಾಡುವೆ. ಅಧಿವೇಶನದಲ್ಲೂ ಈ ವಿಚಾರದ ಬಗ್ಗೆ ಧ್ವನಿ ಎತ್ತಿ ನ್ಯಾಯ ದೊರಕಿಸುವ ಪ್ರಯತ್ನ ಮಾಡುವೆ’ ಎಂದರು.

ಶಾಸಕ ರೇಣುಕಾಚಾರ್ಯ ಅವರೊಂದಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸಿಎಂ ಗಮನಕ್ಕೆ ತರುವ ಜತೆಗೆ ಸದನದಲ್ಲಿ ಪ್ರಸ್ತಾಪಿಸಿ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕಎಸ್.ವಿ.ರಾಮಚಂದ್ರ ಭರವಸೆ ನೀಡಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮಾತನಾಡಿ, ‘ನೇಮಕಾತಿ ಹೊಂದಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಪದದ ಬದಲಾಗಿ ವಿಲೀನ ಎಂದು ಪರಿಗಣಿಸಬೇಕು. ಸೇವಾನಿರತ ಪದವೀಧರ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು’ ಎಂದು ಆಗ್ರಹಿಸಿದರು.

‘ಸಂಕಲ್ಪ’ ಪಂಚವಾರ್ಷಿಕ ಕ್ರಿಯಾಯೋಜನೆಯನ್ನು ಬಿಡುಗಡೆ ಗೊಳಿಸಲಾಯಿತು. ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಾಲಾಕ್ಷಿ, ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಎನ್.ಇ.ನಟರಾಜ್, ಡಯಟ್ ಪ್ರಾಚಾರ್ಯ ಎಚ್.ಕೆ.ಲಿಂಗರಾಜ್, ಬಿಇಒ ನಿರಂಜನಮೂರ್ತಿ, ರಾಜ್ಯ ಹಿರಿಯ ಉಪಾಧ್ಯಕ್ಷ ಟಿ.ಶಿವಾನಂದ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಾಂತೇಶ ಓಬಜ್ಜಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ರಾಮಪ್ಪ, ಗೌರವಾಧ್ಯಕ್ಷ ಎಂ.ಸಿದ್ದೇಶಿ, ಶಿವಶರಣ ಬಸವ ಪಾಟೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.