ADVERTISEMENT

ದಾವಣಗೆರೆ: ಜಿಲ್ಲೆಯಲ್ಲಿ ಲಾಕ್‌ಡೌನ್‌ ಸದ್ಯಕ್ಕಿಲ್ಲ: ಜಿಲ್ಲಾಧಿಕಾರಿ ಮಾಹಿತಿ

ಸಿಎಂ ಜತೆ ವಿಡಿಯೊ ಕಾನ್ಫರೆನ್ಸ್‌

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 16:47 IST
Last Updated 13 ಜುಲೈ 2020, 16:47 IST
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ   

ದಾವಣಗೆರೆ: ಜಿಲ್ಲೆಯಲ್ಲಿ ಲಾಕ್‌ಡೌನ್‌ ಮಾಡುವ ಬಗ್ಗೆ ಯಾವುದೇ ನಿರ್ಧಾರ ಸದ್ಯಕ್ಕೆ ಕೈಗೊಂಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಇಲ್ಲಿನ ಸಂಸದರು, ಶಾಸಕರು, ವಿವಿಧ ಜನಪ್ರತಿನಿಧಿಗಳ ಜತೆಗೆ ಈ ಬಗ್ಗೆ ಚರ್ಚೆ ಮಾಡಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಕೊರೊನಾ ಮತ್ತು ಜಿಲ್ಲೆಯ ಇತರ ಮಾಹಿತಿಗಳನ್ನು ಪಡೆಯಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಡೆಸಿದ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಬಳಿಕ ಅವರು ಮಾಹಿತಿ ನೀಡಿದರು.

‘ಲಾಕ್‌ಡೌನ್‌ ಮಾಡಿದರೂ, ಲಾಠಿ ಬೀಸಿದರೂ ಅನಗತ್ಯ ಓಡಾಟ ನಿಲ್ಲಿಸದೇ ಇರುವುದನ್ನು ನೋಡಿದ್ದೇವೆ. ನಾನು ಬದಲಾಗದೇ ಊರು ಬದಲಾಗಲ್ಲ ಎಂಬ ಭಾವನೆ ಎಲ್ಲರಲ್ಲಿಯೂ ಬರುವವರೆಗೆ ನಿಯಂತ್ರಣ ಕಷ್ಟ’ ಎಂದರು,

ADVERTISEMENT

ಜಿಲ್ಲೆಯಲ್ಲಿ ಈವರೆಗೆ 126 ಕಂಟೈನ್‌ಮೆಂಟ್‌ ವಲಯಗಳನ್ನು ಮಾಡಲಾಗಿದೆ. ಅದರಲ್ಲಿ ಈಗ ಗ್ರಾಮೀಣ ಪ್ರದೇಶದಲ್ಲಿ 21 ಮತ್ತು ನಗರ ಪ್ರದೇಶದಲ್ಲಿ 60 ಸಕ್ರಿಯವಾಗಿವೆ. ಈ ವಲಯಗಳಲ್ಲಿ ಜನರು ಓಡಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಬಫರ್‌ ಝೋನ್‌ನ ಎಲ್ಲರಿಗೂ ಪರೀಕ್ಷೆ ನಡೆಸಲಾಗುವುದು. ಜಿಲ್ಲೆಯಲ್ಲಿ ಈವರೆಗೆ 32 ಸಾವಿರ ಸ್ವ್ಯಾಬ್‌ ಸಂಗ್ರಹ ಮಾಡಲಾಗಿದೆ. ಎರಡು ಖಾಸಗಿ ಮತ್ತು ಒಂದು ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್‌ಗಳಿದ್ದು, 1,420 ಕೋವಿಡ್ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಸುವ್ಯವಸ್ಥಿತ ವೈದ್ಯಕೀಯ ಸೌಲಭ್ಯಗಳಿದ್ದರೂ ಸಾವಿನ ಪ್ರಮಾಣ ಹೆಚ್ಚಿದೆ. ಶೇ 3.73 ರಷ್ಟಿರುವ ಮರಣ ಪ್ರಮಾಣವನ್ನು ಕಡಿಮೆ ಮಾಡಬೇಕು. ರ‍್ಯಾಪಿಡ್ ಆಂಟಿಜೆನ್ ಟೆಸ್ಟ್‌ನೊಂದಿಗೆ, ಸ್ವಾಬ್ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದರು.

ಯಾವುದೇ ಕಾರಣಕ್ಕೂ ಮೈಮರೆಯಬಾರದು. ಕೊರೊನಾ ನಿಯಂತ್ರಿಸಬೇಕು. ಅದರ ಕೊಂಡಿ ಕಳಚಲು ಕ್ರಮ ಕೈಗೊಳ್ಳಬೇಕು. ರೈತರ ಹಿತದೃಷ್ಟಿಯಿಂದ ಕೃಷಿಗೆ ಪೂರಕವಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಇನ್ನಿತರೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಏನಾದರೂ ಸಮಸ್ಯೆಗಳಿದ್ದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು, ಜಿಲ್ಲಾ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದರು.

‘ಕಂಟೈನ್‌ಮೆಂಟ್‌ ವಲಯ ಮತ್ತು ಇತರ ಕಡೆಗಳಲ್ಲಿ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್‌ ಧರಿಸುವುದು, ಸ್ಯಾನಿಟೈಸ್‌ ಮಾಡಿಕೊಳ್ಳುವುದರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡು ಬರುತ್ತಿದೆ. ನಾವು ಬಿಡುವುದಿಲ್ಲ. ನಿಯಮ ಪಾಲನೆ ಮಾಡದೇ ಇದ್ದರೆ ಕ್ರಮ ಕೈಗೊಳ್ಳುತ್ತೇವೆ. ಮಾಸ್ಕ್‌ ಧರಿಸದಿದ್ದರೆ ದಂಡ ವಿಧಿಸುತ್ತೇವೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪದ್ಮ ಬಸವಂತಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಡಿಎಚ್‌ಒ ಡಾ.ರಾಘವೇಂದ್ರಸ್ವಾಮಿ, ಡಿಎಸ್ ಡಾ.ನಾಗರಾಜ್, ಡಿಎಸ್‌ಒ ಡಾ.ರಾಘವನ್ ಇದ್ದರು.

‘ಶಿಷ್ಯವೇತನ ಕೊಡಿಸಲು ಕ್ರಮ ಕೈಗೊಳ್ಳಿ’

ಜೆಜೆಎಂ ಮೆಡಿಕಲ್ ಕಾಲೇಜಿನ ವೈದ್ಯರಿಗೆ ಶಿಷ್ಯ ವೇತನವನ್ನು ಕಾಲೇಜಿನ ಆಡಳಿತ ಮಂಡಳಿಯವರೇ ಭರಿಸಬೇಕು ಎಂದು ಸರ್ಕಾರ ಸೂಚಿಸಿರುವಂತೆ ಆಡಳಿತ ಮಂಡಳಿಯನ್ನು ಜಿಲ್ಲಾಧಿಕಾರಿ ಸಂಪರ್ಕಿಸಬೇಕು. ಚರ್ಚಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಚಿವ ಡಾ. ಸುಧಾಕರ್‌ ಸೂಚಿಸಿದರು.

‘ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಈಗಾಗಲೇ ಸಭೆ ನಡೆಸಲಾಗಿದೆ. ಶಿಷ್ಯವೇತನ ಸಂಬಂಧ ಆಡಳಿತ ಮಂಡಳಿಯಿಂದ ಲಿಖಿತ ಆದೇಶ ಬರುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಹೇಳಿದ್ದಾರೆ. ಮಂಗಳವಾರವೇ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಲಾಗುವುದು’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.