ದಾವಣಗೆರೆ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ವ್ಯಾಪಾರಿಗಳು ಪ್ರತ್ಯೇಕ ಪರವಾನಗಿ ಪಡೆಯುವುದು ಕಡ್ಡಾಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ತಂಬಾಕು ವ್ಯಾಪಾರ ಮಾಡುವ ನಾಲ್ವರು ಮಾತ್ರ ಈವರೆಗೆ ಪರವಾನಗಿ ಪಡೆದಿದ್ದಾರೆ. ಈ ಕುರಿತು ನಗರಾಭಿವೃದ್ಧಿ ಕೋಶ ಗಮನ ಹರಿಸಬೇಕು’ ಎಂದು ಸೂಚನೆ ನೀಡಿದರು.
‘ಕೋಟ್ಪಾ ಕಾಯ್ದೆಯ ಪ್ರಕಾರ ಶಾಲೆ–ಕಾಲೇಜುಗಳ ಸುತ್ತ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯ ಗಮನ ಹರಿಸಬೇಕು. ತಂಬಾಕು ಬಳಕೆಯಾಗದಂತೆ ನೋಡಿಕೊಳ್ಳಬೇಕು’ ಎಂದರು.
‘ಶಾಲೆ–ಕಾಜೇಜುಗಳು ತಂಬಾಕು ಉತ್ಪನ್ನ ಮುಕ್ತ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು. ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಸರ್ಕಾರ ರೂಪಿಸಿದ ಮೊಬೈಲ್ ಆ್ಯಪ್ ಬಳಕೆ ಮಾಡಬೇಕು’ ಎಂದು ಹೇಳಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ. ರಾಘವನ್ ತ್ರೈಮಾಸಿಕ ಸಭೆಯ ಅನುಪಾಲನಾ ವರದಿ ಮಂಡಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್. ಷಣ್ಮುಖಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗೇಂದ್ರಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಅಬಕಾರಿ ಇಲಾಖೆಯ ಉಪ ಆಯುಕ್ತ ಸಿ.ಎನ್.ಜನೈ, ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಬಿ.ಘಂಟಿ, ಡಿಡಿಪಿಯು ಕರಿಬಸಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್, ಜಿಲ್ಲಾ ಅಂಕಿತ ಅಧಿಕಾರಿ ಡಾ.ನಾಗರಾಜ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.