ದಾವಣಗೆರೆ: ಇಲ್ಲಿನ ರೇಣುಕ ಮಂದಿರದಲ್ಲಿ ಜುಲೈ 21, 22ರಂದು ನಡೆಯಲಿರುವ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಅಂದಾಜು 20,000 ದಿಂದ 25,000 ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ಸಮಾರಂಭದಲ್ಲಿ ಭಾಗವಹಿಸಲು ಪಂಚಪೀಠಾಧೀಶ್ವರರು ಒಪ್ಪಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ. 500ಕ್ಕೂ ಹೆಚ್ಚು ಸ್ವಾಮೀಜಿಗಳು, ಶಿವಾಚಾರ್ಯರು ಪಾಲ್ಗೊಳ್ಳಲಿದ್ದಾರೆ. ವಸತಿ ವ್ಯವಸ್ಥೆ, ದಾಸೋಹ ಸೇರಿದಂತೆ ಎಲ್ಲ ರೀತಿಯಲ್ಲೂ ಸಿದ್ಧತೆ ನಡೆಸಿದ್ದು, ಹಲವು ಸಮಿತಿಗಳನ್ನು ರಚಿಸಲಾಗಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎರಡು ದಿನಗಳ ಸಮಾರಂಭದ ಕೊನೆಯಲ್ಲಿ ಜಾತಿ ಗಣತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ನಿರ್ಣಯಗಳನ್ನು ಕೈಗೊಂಡು ಪ್ರಕಟಿಸಲಾಗುವುದು. 15 ವರ್ಷಗಳಿಂದ ಪಂಚಪೀಠಾಧೀಶ್ವರರ ನಡುವೆ ಇದ್ದ ತಾತ್ವಿಕ ಚಿಂತನೆಗಳಲ್ಲಿನ ಸಣ್ಣ ಭಿನ್ನಾಭಿಪ್ರಾಯ ಕೊನೆಗೊಳ್ಳುತ್ತಿರುವುದು ಸಂತೋಷದ ವಿಚಾರ ಎಂದು ಹೇಳಿದರು.
ರಾಜ್ಯದ ಎಲ್ಲ ಮಠಾಧೀಶರು, ಗುರುವಿರಕ್ತರನ್ನು ಸೇರಿಸಿ ಕಾರ್ಯಕ್ರಮ ಮಾಡಲಾಗುತ್ತಿದೆ. ಐವರು ಜಗದ್ಗುರುಗಳು ಭಾಗವಹಿಸುವ ಬಗ್ಗೆ ಇದ್ದ ಅನುಮೂನ ದೂರವಾಗಿದೆ. ಎಲ್ಲರೂ ಭಾಗವಹಿಸುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಮಾನವೀಯ ಮೌಲ್ಯ ಅರಿಯಲು ಇದೊಂದು ಒಳ್ಳೆ ಅವಕಾಶ ಆಗಲಿದೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಗೌರವಾಧ್ಯಕ್ಷ, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಮಾರಂಭದ ಭಾಗವಾಗಿ ಜುಲೈ 22ರಂದು ಸಂಸ್ಕೃತಿ ಸಂವರ್ಧನೆಗಾಗಿ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ, ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಮುಖಂಡರಾದ ಎಸ್.ಜಿ.ಉಳವಯ್ಯ, ಬಿ.ಎಂ.ವಾಗೀಶ ಸ್ವಾಮಿ, ಆರ್.ಟಿ.ಪ್ರಶಾಂತ್ ಸೇರಿದಂತೆ ಇನ್ನಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.