ದಾವಣಗೆರೆ: ‘ಈ ಬಾರಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ' ಎಂದು ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ‘ವೈ.ಎ. ನಾರಾಯಣಸ್ವಾಮಿ ಅವರು ಸತತ ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಈ ಬಾರಿಯೂ ಅವರು ಗೆಲುವು ಸಾಧಿಸಲು ಯಾವುದೇ ತೊಂದರೆ ಇಲ್ಲ. ಆದರೂ ನಾವು ಮೈಮರೆಯಬಾರದು. ಸಂಘಟಿತ ಹೋರಾಟ ಮಾಡಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕಾಗಿದೆ’ ಎಂದು ಹೇಳಿದರು.
‘ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳ ದರ್ಬಾರ್ ಆಗಿದೆ. ಶಿಕ್ಷಣ ಇಲಾಖೆಯಲ್ಲಿ ಪ್ರಜಾಪ್ರಭುತ್ವವೇ ಇಲ್ಲದಂತಾಗಿದೆ’ ಎಂದು ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಆರೋಪಿಸಿದರು.
‘ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಹಣದಿಂದ ಗೆಲ್ಲಬಹುದು ಎಂಬ ಭ್ರಮೆ ಕಾಂಗ್ರೆಸ್‌ಗೆ ಇದೆ. ಅದು ಸಾಧ್ಯವಾಗುವುದಿಲ್ಲ. ಏಕೆಂದರೆ ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಶಿಕ್ಷಕರ ಸ್ಪಂದನೆಗೆ ಸಾಕಷ್ಟು ಶ್ರಮಿಸಿದ್ದೇನೆ’ ಎಂದರು.
‘ಕಾಂಗ್ರೆಸ್ ಸರ್ಕಾರ ಬಂದ ನಂತರ ಶಿಕ್ಷಕರು ಒತ್ತಡದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಸರಿಯಾದ ಸಮಯಕ್ಕೆ ಸಂಬಳ, ರಜೆ, ಭತ್ಯೆಗಳು ಇಲ್ಲದಂತಾಗಿವೆ’ ಎಂದು ಆರೋಪಿಸಿದರು.
ಮಾಜಿ ಶಾಸಕ ಪ್ರೊ. ಎನ್. ಲಿಂಗಣ್ಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್, ವಿಧಾನಪರಿಷತ್ ಸದಸ್ಯ ನವೀನ್, ಭಾನುವಳ್ಳಿ ಅಣ್ಣಪ್ಪ, ರಾಮ್ ರೆಡ್ಡಿ, ಸಾಂಬಶಿವಯ್ಯ ಹಾಗೂ ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.