ADVERTISEMENT

‘ಗ್ರಾಮ ಭೇಟಿ’ ಕಾರ್ಯಕ್ರಮ ನಾಳೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 17:01 IST
Last Updated 24 ಜೂನ್ 2019, 17:01 IST
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಮಾತನಾಡಿದರು
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಮಾತನಾಡಿದರು   

ದಾವಣಗೆರೆ: ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಲು ಮುಖ್ಯಮಂತ್ರಿ ಸೂಚಿಸಿದ್ದು, ಜಿಲ್ಲೆಯ ಜಗಳೂರು ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಜಿಲ್ಲಾಡಳಿತದಿಂದ ಜೂನ್‌ 25 ರಂದು ವಿವಿಧ ಇಲಾಖೆಗಳ ಅಧಿಕಾರಿಗಳು ‘ಗ್ರಾಮ ಭೇಟಿ’ ಮಾಡುವ ಮೂಲಕ ಜನರ ಕುಂದು–ಕೊರತೆ ಆಲಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಗಳೂರು ತಾಲ್ಲೂಕಿನಲ್ಲಿ ನಡೆಯುವ ಗ್ರಾಮ ಭೇಟಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದಂತೆ ಈ ಕಾರ್ಯಕ್ರಮ ಇರಲಿದ್ದು, ಪ್ರತಿ ಗ್ರಾಮಗಳಿಗೆ ನಿಯೋಜಿಸಲಾದ ಆಯಾ ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡುವುದರ ಮೂಲಕ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಸೂಚಿಸಿದರು.

ADVERTISEMENT

ಜಗಳೂರು ತಾಲ್ಲೂಕು ಹೆಚ್ಚು ಬರಕ್ಕೆ ತುತ್ತಾಗಿರುವ ಕಾರಣ ಮೊದಲು ಅಲ್ಲಿನ ಎಲ್ಲಾ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದು, ಮುಂದಿನ ದಿನಗಳಲ್ಲಿ ಬೇರೆ ತಾಲ್ಲೂಕುಗಳಿಗೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಪಟ್ಟಿ ಮಾಡಿ ತಹಶೀಲ್ದಾರ್ ಕಚೇರಿಗೆ ನೀಡಬೇಕು ಎಂದರು.

ಉಪ ವಿಭಾಗಾಧಿಕಾರಿ ಬಿ.ಟಿ. ಕುಮಾರ್‍ಸ್ವಾಮಿ, ’ಅಧಿಕಾರಿಗಳು ಯಾವ ಯಾವ ಗ್ರಾಮಗಳಿಗೆ ಭೇಟಿ ನೀಡಬೇಕು ಎಂಬುದರ ಮಾಹಿತಿ ನೀಡಲಾಗಿದೆ. ಮೊದಲು ಗ್ರಾಮ ಪಂಚಾಯಿತಿಗಳಿಗೆ ತೆರಳಿ ಅಲ್ಲಿನ ಅಧಿಕಾರಿಗಳ ಬಳಿ ಮಾಹಿತಿ ಪಡೆಯಬೇಕು‘ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮನಾಯ್ಕ್, ಜಗಳೂರು ತಾಲ್ಲೂಕು ಪಂಚಾಯಿತಿ ಇಒ ಜಾನಕಿರಾಮ್, ತಹಶೀಲ್ದಾರ್ ತಿಮ್ಮಣ್ಣ, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ದೂಡಾ ಆಯುಕ್ತ ಆದಪ್ಪ, ಡಿಎಚ್‍ಒ ಡಾ. ತ್ರಿಪುಲಾಂಭ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.