ADVERTISEMENT

ಹೊನ್ನಾಳಿ | ‘ಮತಗಳ್ಳತನದಿಂದ ಅಧಿಕಾರಕ್ಕೇರಿದ ಮೋದಿ’

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 6:06 IST
Last Updated 21 ಅಕ್ಟೋಬರ್ 2025, 6:06 IST
ಹೊನ್ನಾಳಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಮತಗಳ್ಳತನದ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಎಚ್.ಬಿ. ಮಂಜಪ್ಪ ಮಾತನಾಡಿದರು
ಹೊನ್ನಾಳಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಮತಗಳ್ಳತನದ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಎಚ್.ಬಿ. ಮಂಜಪ್ಪ ಮಾತನಾಡಿದರು   

ಹೊನ್ನಾಳಿ: ‘ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದ ಹಿಂದಿನ ಸತ್ಯವನ್ನು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಟಾ ಬಯಲು ಮಾಡಿದ್ದಾರೆ’ ಎಂದು ಬಯಲು ಸೀಮೆ ಪ್ರದೇಶಾಭಿವೃದ್ಧಿ ನಿಗಮದ ರಾಜ್ಯ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು.

ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ ಹಾಗೂ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಮತಗಳ್ಳತನ ಕುರಿತು ಆರಂಭಿಸಿರುವ ಸಹಿ ಸಂಗ್ರಹ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.

‘ಚುನಾವಣಾ ಆಯೋಗವನ್ನು ಮೋದಿಯವರು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ. ಮತದಾರರ ಪಟ್ಟಿಯಿಂದ ಯಾರ ಹೆಸರನ್ನಾದರೂ ಸೇರಿಸುವ ಅಥವಾ ಕೈಬಿಡುವ ಮೂಲಕ ಮತಗಳ್ಳತನ ಮಾಡಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿಯವರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಪ್ರದರ್ಶನ ಮಾಡುವ ಮೂಲಕ ಇಡೀ ಜಗತ್ತಿನ ಗಮನ ಸೆಳೆದಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿಯವರ ಹೋರಾಟದಿಂದ ಜಾಗೃತಗೊಂಡಿರುವ ಬಿಹಾರದ ಜನ ಈ ಬಾರಿ ಕಾಂಗ್ರೆಸ್ ಒಕ್ಕೂಟಕ್ಕೆ ಜಯ ತಂದುಕೊಡಲಿದ್ದಾರೆ ಎಂದರು.

ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ಪ್ರತಿ ತಾಲ್ಲೂಕಿನಿಂದ 25 ಸಾವಿರ ಸಹಿ ಸಂಗ್ರಹ ಮಾಡುವ ಗುರಿ ಇದೆ. ಜಿಲ್ಲೆಯಿಂದ ಒಟ್ಟು 2 ಲಕ್ಷ ಸಹಿ ಸಂಗ್ರಹ ಮಾಡಬೇಕಾಗಿದೆ. ಆದ್ದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಸಹಿ ಸಂಗ್ರಹದ ಜವಬ್ದಾರಿಯನ್ನು ಹೊರಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ ಖ್ಯಾತಿ ನಮ್ಮ ತಾಲ್ಲೂಕಿಗೆ ಸೇರಬೇಕು. ಈ ಪ್ರತಿಗಳನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸಿಕೊಡಲಾಗುವುದು ಎಂದರು.

ಕೆಪಿಸಿಸಿ ಸದಸ್ಯ ಈಶ್ವರನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಆರ್. ನಾಗಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಮಧುಗೌಡ, ಮುಖಂಡರಾದ ಡಿ.ಜಿ. ವಿಶ್ವನಾಥ್, ಎಚ್.ಎ. ಗದ್ದಿಗೇಶ್, ಪಿಎಲ್‍ಡಿ ಬ್ಯಾಂಕ್ ನಿರ್ದೇಶಕಿ ಆಶಾ ಮಾತನಾಡಿದರು.

ಪುರಸಭೆ ಅಧ್ಯಕ್ಷ ಎ.ಕೆ. ಮೈಲಪ್ಪ, ಮಹಿಳಾ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷೆ ಪುಷ್ಪಾ, ಮುಖಂಡರಾದ ಎಚ್.ಎ. ಉಮಾಪತಿ, ಎಚ್.ಬಿ. ಅಣ್ಣಪ್ಪ, ಬೆನಕನಹಳ್ಳಿ ವೀರಣ್ಣ ಇದ್ದರು.

2ಇಪಿ : ಮತಗಳ್ಣತನದ ವಿರುದ್ಧ ಸಹಿ ಸಂಗ್ರಹ ಅಭಿಯಾನದ ಬೋರ್ಡ್ ನಲ್ಲಿ ಶಾಸಕ ಡಿ.ಜಿ. ಶಾಂತನಗೌಡ ಅವರು ಸಹಿ ಮಾಡುವ ಮೂಲಕ ಚಾಲನೆ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.