ದಾವಣಗೆರೆ: ‘ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಹೋರಾಟ ನಡೆಸಲು ಆಸ್ಪದ ನೀಡದಂತೆ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ಮಂಗಳವಾರ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಾತನಾಡಿದ ಅವರು, ‘ನ್ಯಾಯಮೂರ್ತಿ ನಾಗಮೋಹನದಾಸ ಸಮಿತಿ ನೀಡಿರುವ ವರದಿ ಪರಿಶೀಲನೆ ಹಂತದಲ್ಲಿದೆ. ಸಚಿವ ಸಂಪುಟದಲ್ಲಿರುವ ವಾಲ್ಮೀಕಿ ಸಮುದಾಯದ ಸಚಿವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಸ್ವಾಮೀಜಿ ಯಾವುದೇ ಸಂಶಯ ಇಟ್ಟುಕೊಳ್ಳುವುದು ಬೇಡ’ ಎಂದು ಹೇಳಿದರು.
ಇದಕ್ಕೂ ಮೊದಲು ಮಾತನಾಡಿದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ‘ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಘೋಷಣೆ ಮಾಡಿದರೆ ಅವರನ್ನು ಅಭಿನಂದಿಸುತ್ತೇವೆ. ರಾಜ್ಯ ಸರ್ಕಾರವು ಮಾರ್ಚ್ 9ರೊಳಗೆ ನಿರ್ಧಾರ ತೆಗೆದುಕೊಳ್ಳದೇ ಇದ್ದರೆ, ಇದೇ ಜಾಗದಲ್ಲಿ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇನೆ. ನಾನೇನಾದರೂ ಸತ್ತರೆ ಸಮುದಾಯದವರು ನನ್ನ ಜೊತೆಗೆ ಇರುತ್ತೀರಲ್ಲವೇ’ ಕೇಳುವ ಮೂಲಕ ಎಚ್ಚರಿಕೆ ನೀಡಿದರು. ಇದರಿಂದ ಬೇಸರಗೊಂಡ ಮುಖ್ಯಮಂತ್ರಿ ಈ ರೀತಿ ಮಾತನಾಡಬಾರದು ಎಂದು ಮನವಿ ಮಾಡಿಕೊಂಡರು. ಬಿಜೆಪಿ ಶಾಸಕರು ಸಹ ಸ್ವಾಮೀಜಿಯನ್ನು ಸಮಾಧಾನಪಡಿಸಲು ಯತ್ನಿಸಿದರು.
‘ಸಾವಿನ ಮಾತು ಬೇಡ, ಆದಷ್ಟು ಬೇಗನೆ ಬೇಡಿಕೆ ಈಡೇರಿಸುತ್ತೇನೆ’ ಎಂದು ಯಡಿಯೂರಪ್ಪ ಸ್ವಾಮೀಜಿಗೆ ಭರವಸೆ ನೀಡಿದರು.
‘ಯಡಿಯೂರಪ್ಪ ಅವರು ಶೀಘ್ರದಲ್ಲೇ ಮೀಸಲಾತಿ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತೇನೆ. ನಾನು ಸ್ವಾರ್ಥಕ್ಕಾಗಿ ಈ ರೀತಿಯ ಹೇಳಿಕೆ ನೀಡಿರಲಿಲ್ಲ. ರಾಜ್ಯದ ಮುಖ್ಯಮಂತ್ರಿ ನಮಗೆ ತಂದೆ ಇದ್ದಂತೆ. ನಮ್ಮ ಸಂಕಟವನ್ನು ಅವರ ಬಳಿ ಹೇಳಿಕೊಳ್ಳುತ್ತಿದ್ದೇವೆ’ ಎಂದು ಹೇಳಿದರು.
ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣಗೊಂಡಿತ್ತು. ಸ್ವಾಮೀಜಿ ಬಳಿಕ ಮಾತನಾಡಿದ ಮುಖ್ಯಮಂತ್ರಿ, ಸ್ವಾಮೀಜಿ ಸಮಾಜದ ನೋವನ್ನು ಹೇಳಿಕೊಂಡಿದ್ದಾರೆ. ಅವರ ಭಾವನೆ ನನಗೆ ಅರ್ಥವಾಗುತ್ತದೆ. ಸಮಾಜದ ಪರವಾಗಿ ಕೇಳುವ ಅಧಿಕಾರ ಸ್ವಾಮೀಜಿಗೆ ಇದೆ. ಆದಷ್ಟು ಬೇಗನೆ ಮೀಸಲಾತಿ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ’ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.