ದಾವಣಗೆರೆ: ಗೊಲ್ಲ (ಯಾದವ) ಸಮುದಾಯವು ಮೌಢ್ಯದಿಂದ ಹೊರಬರಬೇಕು. ಮುಟ್ಟಾದ ಮಹಿಳೆಯರನ್ನು ಗೊಲ್ಲರ ಹಟ್ಟಿಯಿಂದ ಹೊರಗಿಡುವ ಪದ್ಧತಿಯನ್ನು ನಿಲ್ಲಿಸಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಮಾಡಿದರು.
ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಗೊಲ್ಲರ (ಯಾದವ) ಸಂಘದಿಂದ ಶನಿವಾರ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಯಕೊಂಡ ಕ್ಷೇತ್ರದಲ್ಲಿ ಎರಡು ಸಮುದಾಯ ಭವನಗಳ ನಿರ್ಮಾಣಕ್ಕೆ ಈಗಾಗಲೇ ಅನುದಾನ ನೀಡಲಾಗಿದೆ. ಇನ್ನುಳಿದ ಗೊಲ್ಲರಹಟ್ಟಿಗಳಲ್ಲೂ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಎಲ್ಲಾ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.
ಗೊಲ್ಲ ಸಮುದಾಯವು ಅತ್ಯಂತ ಹಿಂದುಳಿದಿದೆ. ಸಮುದಾಯದವರು ಶ್ರಮಜೀವಿಗಳಾಗಿದ್ದು, ಮಾತು ಕೊಟ್ಟರೆ ತಪ್ಪಲ್ಲ. ಕೃಷ್ಣನ ಸಂದೇಶಗಳು ಸಾರ್ವಕಾಲಿಕವಾಗಿದ್ದು, ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಅಭಿಪ್ರಾಯಪಟ್ಟರು.
ಕೃಷ್ಣ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚು. ಮಾನವ ಕುಲಕ್ಕೆ ದಾರಿ ತೋರಿದ ಕೃಷ್ಣ ಇಡೀ ಜಗತ್ತಿಗೆ ಬೇಕಾದ ದೇವರು ಎಂದು ಹೇಳಿದರು.
ಸಮುದಾಯದ ಬೇಡಿಕೆಗಳ ಈಡೇರಿಕೆ ಬಗ್ಗೆ ಸಚಿವರು, ಶಾಸಕರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು. ಸಮುದಾಯದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಅವಶ್ಯವಿದೆ ಎಂದು ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ ಹೇಳಿದರು.
ನಿವೃತ್ತ ಪ್ರಾಂಶುಪಾಲ ದಾದಾಪೀರ್ ನವಿಲೇಹಾಳ್ ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವಾಮದೇವಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ಸಂಘದ ಗೌರವಾಧ್ಯಕ್ಷ ಎಸ್. ಹನುಮಂತಪ್ಪ, ಬಿ.ತಿಪ್ಪಣ್ಣ, ಎಸ್.ಎಂ.ಗಂಗಾಧರಪ್ಪ, ನಸೀರ್ ಅಹಮದ್, ಸುಮತಿ ಜಯಪ್ಪ ಇನ್ನಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.