ADVERTISEMENT

ದಾವಣಗೆರೆ: ಮಾದಕವಸ್ತು ದಾಸರಾಗುತ್ತಿರುವ ಯುವಜನ

​ಪ್ರಜಾವಾಣಿ ವಾರ್ತೆ
Published 22 ಮೇ 2025, 14:13 IST
Last Updated 22 ಮೇ 2025, 14:13 IST
ದಾವಣಗೆರೆಯ ಭಾಷಾ ನಗರದ ಆರೋಗ್ಯ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ ಉದ್ಘಾಟಿಸಿದರು
ದಾವಣಗೆರೆಯ ಭಾಷಾ ನಗರದ ಆರೋಗ್ಯ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ ಉದ್ಘಾಟಿಸಿದರು   

ದಾವಣಗೆರೆ: ಹದಿಹರೆಯದ ಯುವಕ ಮತ್ತು ಯುವತಿಯರು ಮಾದಕವಸ್ತುಗಳ ದಾಸರಾಗುತ್ತಿದ್ದಾರೆ. ಮಾದಕ ವ್ಯವಸನಕ್ಕೆ ಯುವ ಸಮೂಹ ಬಲಿಯಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ ಬೇಸರ ವ್ಯಕ್ತಪಡಿಸಿದರು.

ಇಲ್ಲಿನ ಭಾಷಾ ನಗರದ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಸಂಘದ ವತಿಯಿಂದ ‘ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ’ ಕುರಿತು ಗುರುವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಗಾಂಜಾ, ಅಫೀಮು, ಬ್ರೌನ್‌ ಶುಗರ್‌, ಕೋಕೆನ್‌ ಮತ್ತು ನಿಕೋಟಿನ್‌ನಂತಹ ಮಾದಕ ವಸ್ತುಗಳ ವ್ಯಸನ ಯುವಜನರಲ್ಲಿ ಹೆಚ್ಚಾಗುತ್ತಿದೆ. ಇವರು ಸಮಾಜಘಾತುಕ ಶಕ್ತಿಗಳಾಗಿ ಬೆಳೆಯುವ ಅಪಾಯವಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

‘ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಸ್ಥಿತಿಯ ಮೇಲೆ ಗಾಢ ಪರಿಣಾಮ ಬೀರಲಿದೆ. ಮಾದಕ ವಸ್ತುಗಳ ಸಾಗಣೆ, ಸೇವನೆ ಮತ್ತು ಮಾರಾಟದಂತಹ ಪ್ರಕರಣ ಕಂಡುಬಂದರೆ ಜನರು ನಿರ್ಲಕ್ಷ್ಯ ಮಾಡಬಾರದು. ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು’ ಎಂದು ಸಲಹೆ ನೀಡಿದರು.

‘ಮಾದಕವಸ್ತು ಪ್ರಕರಣದಲ್ಲಿ ಸಿಕ್ಕಿಬಿದ್ದರೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಕಾನೂನು ಪ್ರಕಾರ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದು ವ್ಯಕ್ತಿಯ ಕುಟುಂಬದ ಮೇಲೆ ಪರಿಣಾಮವುಂಟು ಮಾಡುತ್ತದೆ. ವ್ಯಸನಮುಕ್ತ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಘನತೆಯಿಂದ ಬದುಕಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು’ ಎಂದು ಕಿವಿಮಾತು ಹೇಳಿದರು.

‘ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005ರಿಂದ ಅನುಷ್ಠಾನಕ್ಕೆ ಬಂದಿದೆ. ದೈಹಿಕ ಹಲ್ಲೆ ಮಾತ್ರವಲ್ಲದೇ ಮಾನಸಿಕ ಕಿರುಕುಳ ಕೂಡ ದೌರ್ಜನ್ಯದ ವ್ಯಾಪ್ತಿಗೆ ಬರುತ್ತದೆ. ವರದಕ್ಷಿಣೆಗಾಗಿ ಕಿರುಕುಳ, ಮನೆಯಿಂದ ಹೊರ ಹಾಕುವಂತಹ ತಪ್ಪುಗಳಿಗೆ ಕಾನೂನು ಪ್ರಕಾರ ಶಿಕ್ಷೆ ವಿಧಿಸಲಾಗುತ್ತದೆ. ಇಂತಹ ಕಿರುಕುಳ ಅನುಭವಿಸುವ ಮಹಿಳೆಯರಿಗೆ ಉಚಿತ ಕಾನೂನು ನೆರವು ಸಿಗಲಿದೆ’ ಎಂದರು.

ನೆರಳು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನದ ಪೀಠಿಕೆ ವಾಚಿಸಿದರು. ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ವೈದ್ಯಾಧಿಕಾರಿ ಡಾ.ಎನ್.ರೇಖಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.