ADVERTISEMENT

ಅಹಾರ ಪೂರೈಕೆಯಲ್ಲಿ ಲೋಪ: ಅಸಮಾಧಾನ

ಕಿರು ಮೃಗಾಯಲ ಪರಿಶೀಲಿಸಿದ ಮಾಯಕೊಂಡ ಶಾಸಕ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 3:13 IST
Last Updated 20 ಜನವರಿ 2026, 3:13 IST
ಮಾಯಕೊಂಡ ಸಮೀಪದ ಆನಗೋಡು ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಮಾಯಕೊಂಡ ಸಮೀಪದ ಆನಗೋಡು ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಮಾಯಕೊಂಡ: ಸಮೀಪದ ಆನಗೋಡು ಬಳಿಯ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲಕ್ಕೆ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅವರು, ಮೃಗಾಲಯದಲ್ಲಿ ಸೂಕ್ತ ನಿರ್ವಹಣೆ ಇಲ್ಲದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

‘ಜಿಂಕೆಗಳ ಸಾವಿಗೆ ‘ಹೆಮರಾಜಿಕ್ ಸೆಪ್ಟಿಸೆಮಿಯಾ’ ಎಂಬ ಸಾಂಕ್ರಾಮಿಕ ರೋಗವಿರಬಹುದು ಎಂದು ಪ್ರಾಣಿ ಆರೋಗ್ಯ ಸಲಹಾ ಸಮಿತಿ ಶಂಕಿಸಿದೆ. ರೋಗ ಹರಡದಂತೆ ಉಳಿದ ಜಿಂಕೆಗಳಿಗೆ ರೋಗ ನಿರೋಧಕ ಮತ್ತು ಮುನ್ನೆಚ್ಚರಿಕೆ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ಹಿರಿಯ ಪಶುವೈದ್ಯರು ಮತ್ತು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸಾ ಕ್ರಮ ಜಾರಿಗೊಳಿಸಲಾಗಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ಮಾಹಿತಿ ನೀಡಿದರು.

ADVERTISEMENT

ಆಹಾರ ದಾಸ್ತಾನು ಕೊಠಡಿಯಲ್ಲಿರುವ ಕೊಳತೆ ತರಕಾರಿ, ಕೊಳತೆ ಕಾಳುಗಳನ್ನು ನೋಡಿದರೆ ಪ್ರಾಣಿ, ಪಕ್ಷಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ₹ 33 ಲಕ್ಷ ಖರ್ಚು ಮಾಡಿ ಆಹಾರ ಸಾಮಗ್ರಿ ಖರೀದಿಸಲಾಗಿದೆ. ಹಣ ದುರ್ಬಳಕೆ ಆಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ. ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಶಾಸಕ ಬಸವಂತಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಕಿರು ಮೃಗಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಆದರೆ 100 ಪ್ರವಾಸಿಗರು ಬಂದರೆ 25 ಜನ ಪ್ರವಾಸಿಗರಿಗೆ ಮಾತ್ರ ಟಿಕೆಟ್ ಹರಿದು ಉಳಿದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳಿವೆ. ಮುಂದೆ ಈ ರೀತಿ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ತಾಕೀತು ಮಾಡಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆನಂದ್, ವಲಯ ಅರಣ್ಯ ಸಂರಕ್ಷಣಾಧಿಕಾರಿ ಇನಾಯತ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಸರುಲ್ಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.