ADVERTISEMENT

ಹುಬ್ಬಳ್ಳಿ: ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗೆ ನೋಟಿಸ್

ಹುಬ್ಬಳ್ಳಿ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ದೀಪಾ ಚೋಳನ್

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2018, 14:29 IST
Last Updated 28 ಸೆಪ್ಟೆಂಬರ್ 2018, 14:29 IST
ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಹುಬ್ಬಳ್ಳಿ ತಾಲ್ಲೂಕು ಕಚೇರಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಹುಬ್ಬಳ್ಳಿ ತಾಲ್ಲೂಕು ಕಚೇರಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.   

ಹುಬ್ಬಳ್ಳಿ: ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ತಾಲ್ಲೂಕು ಕಚೇರಿಗೆ (ಮಿನಿ ವಿಧಾನಸೌಧ) ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದ ಏಳು ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿದರು. ಸಮಯ ಪಾಲನೆ ಮಾಡುವಂತೆ ತಾಕೀತು ಮಾಡಿದರು.

ಪಹಣಿ ಪತ್ರ ವಿತರಣೆ ಕೌಂಟರ್, ಆದಾಯ, ಜಾತಿ ಪ್ರಮಾಣ ಪತ್ರ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಪ್ರಮಾಪತ್ರ ಪಡೆಯಲು ಸರದಿಸಾಲಿನಲ್ಲಿ ನಿಂತಿದ್ದ ಜನರನ್ನು ಸಹ ಮಾತನಾಡಿಸಿ, ಕಚೇರಿ ಕಾರ್ಯವೈಖರಿಗೆ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರಮಾಣ ಪತ್ರ ವಿತರಣಾ ಕೌಂಟರ್‌ಗಳನ್ನು ಹೆಚ್ಚಿಸುವಂತೆ ಜನರು ಮನವಿ ಮಾಡಿದರು.

‘ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ ಬಗ್ಗೆ ‍ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿ ಅವರು ಸೂಚನೆ ನೀಡಿದ್ದಾರೆ. ದಿಢೀರ್ ಭೇಟಿ ನೀಡಿದಾಗ ಅಲ್ಲಿನ ವಾಸ್ತವತೆ ಗೊತ್ತಾಗುತ್ತದೆ’ ಎಂದು ದೀಪಾ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ADVERTISEMENT

‘ಆದಾಯ, ಜಾತಿ ಪ್ರಮಾಣ ಪತ್ರ ಪಡೆಯಲು ಮತ್ತೊಂದು ಕೌಂಟರ್ ತೆರೆಯಲು ಈ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಮತ್ತೊಂದು ಕೌಂಟರ್ ತೆರೆದು ಜನರಿಗೆ ಅನುಕೂಲ ಮಾಡಿಕೊಡಲಾಗುವುದು. ಸಮಸ್ಯೆಗಳನ್ನು ಬಗೆಹರಿಸುವಂತೆ ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದೇನೆ’ ಎಂದರು. ಹೆಚ್ಚುವರಿ ತಹಶೀಲ್ದಾರ್ ಪ್ರಕಾಶ ನಾಸಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.