ADVERTISEMENT

‘ಕುಟುಂಬ ರಾಜಕಾರಣ ಮಾಡುವುದಿಲ್ಲ’

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 9:25 IST
Last Updated 21 ಮಾರ್ಚ್ 2018, 9:25 IST

ಧಾರವಾಡ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮಾಡುತ್ತದೆ ಎಂದು ಕೇಂದ್ರದ ಪರಿಸರ ಮತ್ತು ಸಾಂಸ್ಕೃತಿಕ ಸಚಿವ ಡಾ. ಮಹೇಶ ಶರ್ಮಾ ಹೇಳಿದರು.

ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಎಂದೂ ಕುಟುಂಬ ರಾಜಕಾರಣ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಇದು ಸಂಪೂರ್ಣವಾಗಿ ಕಾರ್ಯಕರ್ತರ ಶ್ರಮದಿಂದ ಬೆಳೆದ ಪಕ್ಷವಾಗಿದ್ದು, ಕಾರ್ಯಕರ್ತರ ಅಭಿಪ್ರಾಯ ಮತ್ತು ಪಕ್ಷದ ವರಿಷ್ಠರ ಸಲಹೆಯೇ ಮುಖ್ಯ ಎಂದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಅಭಿವೃದ್ಧಿಗೆ ಮುಂದಾಗಿದ್ದಾರೆ. ಅವರ ಕೈ ಬಲ ಪಡಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು. ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಪಕ್ಷಕ್ಕಿಂತ ವ್ಯಕ್ತಿ ದೊಡ್ಡವನಲ್ಲ. ಪಕ್ಷ ದೊಡ್ಡದು. ಆದ್ದರಿಂದ ಕಾರ್ಯಕರ್ತರೇ ಪಕ್ಷದ ಬೆನ್ನೆಲುಬಾಗಿದ್ದು, ಕಾರ್ಯಕರ್ತರು ಮನಸ್ಸು ಮಾಡಿದ್ದರಿಂದ ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿಯೂ ಅಧಿಕಾರಕ್ಕೆ ತರಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಸಂಜಯ ಕಪಟಕರ, ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ಯಲ್ಲಪ್ಪ ಅರವಾಳದ, ಮೋಹನ ರಾಮದುರ್ಗ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.