ADVERTISEMENT

ನೌಕರರಿಗೆ ಜೂನ್‌ನಿಂದ ಸಂಬಳ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 8:50 IST
Last Updated 26 ಫೆಬ್ರುವರಿ 2011, 8:50 IST

ಹುಬ್ಬಳ್ಳಿ: ಅನುದಾನ ರಹಿತ ಶಾಲಾ ಕಾಲೇಜುಗಳ ನೌಕರರಿಗೂ ಜೂನ್ ಒಂದರಿಂದ ಸಂಬಳ ನೀಡುವ ಮಹತ್ವದ ನಿರ್ಣಯವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸಭೆಯಲ್ಲಿ ನಡೆದ ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರ ಮತಕ್ಷೇತ್ರದ ಶಾಸಕರು ಹಾಗೂ ಸಚಿವರ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದಾರೆ ಎಂದು ಹೊರಟ್ಟಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈಚೆಗೆ ತಾವು ಧಾರವಾಡದ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿತ್ತು ಎಂದು ಅವರು ವಿವರಿಸಿದ್ದಾರೆ.

ಎಕ್ಸ್ ಗ್ರೇಷಿಯಾವನ್ನು ಪ್ರಾಚಾರ್ಯರು ಹಾಗೂ ಮುಖ್ಯೋಪಾಧ್ಯಾಯರಿಗೂ ವಿಸ್ತರಿಸುವುದು, ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕನಿಷ್ಠ ವೇತನ ಕಡ್ಡಾಯಗೊಳಿಸುವುದು, ಬೋಧಕೇತರ ಸಿಬ್ಬಂದಿಯಲ್ಲಿ ಒಬ್ಬ ದ್ವಿತೀಯ ದರ್ಜೆ ಸಹಾಯಕ ಹಾಗೂ ಒಬ್ಬ ಸೇವಕನನ್ನು ನೇಮಕ ಮಾಡಿಕೊಳ್ಳುವುದು ಮುಂತಾದ ನಿರ್ಧಾರಗಳನ್ನು ಕೂಡ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅನುದಾನಿತ ನೌಕರರಿಗೂ ಕಡ್ಡಾಯವಾಗಿ ನೀಡುವುದು ಸೇರಿದಂತೆ ಅನೇಕ ಪೂರಕ ನಿರ್ಧಾರಗಳನ್ನು ಕೂಡಲೇ ತೆಗೆದು ಕೊಳ್ಳಲಾಗುವುದು ಎಂದು ಸಭೆಯಲ್ಲಿ ಭರವಸೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹ ಮುಕ್ತಾಯಗೊಳಿಸಿದ ಒಂದೆರಡು ದಿನಗಳಲ್ಲೇ ಈ ಸಭೆ ಕರೆದು ಸಮಸ್ಯೆಗಳನ್ನು ಇತ್ಯರ್ಥಪಡಿಸಿದ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉನ್ನತ ಶಿಕ್ಷಣ ಸಚಿವ ಡಾ. ವಿ.ಎಸ್. ಆಚಾರ್ಯ, ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂತಾದವರಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಸಭೆಯಲ್ಲಿ ವಕೀಲ ಬಿ.ಡಿ. ಹಿರೇಮಠ, ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಪದಾಧಿಕಾರಿಗಳಾದ ಆನಂದ ಕುಲಕರ್ಣಿ, ಕೆ.ಎ. ಹಿರೇಮಠ, ಎಸ್.ಎಂ. ಕೊಟಗಿ, ಸಿ.ವಿ. ಹೂಗಾರ, ಎಂ.ಬಿ. ಸಾವಜ್ಜಿಯವರ, ಪ್ರಭಾಕರ, ಎಸ್.ಎಂ. ನಾಯಕ್, ಎಸ್.ಎಂ. ಗಡದಿನ್ನಿ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.