ADVERTISEMENT

ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2017, 7:36 IST
Last Updated 29 ನವೆಂಬರ್ 2017, 7:36 IST
ಧಾರವಾಡದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು
ಧಾರವಾಡದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಧಾರವಾಡ: ಜಿಲ್ಲೆಯಲ್ಲಿ ಪ್ರಭಾವಿ ನಾಯಕರಾಗಿ ಹೊರಹೊಮ್ಮುತ್ತಿರುವ ಸಚಿವ ವಿನಯ ಕುಲಕರ್ಣಿ ಅವರ ಏಳಿಗೆ ಸಹಿಸದೇ ಬಿಜೆಪಿ ನಾಯಕರು ಅವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಬೃಹತ್‌ ರ‍್ಯಾಲಿ ನಡೆಸಿದರು.

ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಆಲೂರು ವೆಂಕಟರಾವ್‌ ವೃತ್ತದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

‘ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಯೋಗೀಶಗೌಡ ಗೌಡರ ಸಹೋದರ ಗುರುನಾಥಗೌಡ ಅವರನ್ನು ಬೆಂಬಲಿಸುತ್ತಿರುವ ಬಿಜೆಪಿ ನಾಯಕರು ಕೊಲೆ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಪ್ರತಿಭಟನಕಾರರು ಆರೋಪ ಮಾಡಿದರು.

ADVERTISEMENT

ಗುರುನಾಥಗೌಡ ಗೌಡರ ಅವರ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವ ಬಿಜೆಪಿಯ ರಾಜೀವ ಚಂದ್ರಶೇಖರ್ ಮಾಲೀಕತ್ವದ ಖಾಸಗಿ ವಾಹಿನಿ ಹಾಗೂ ಜಿಲ್ಲೆಯಲ್ಲಿ ಪ್ರತಿಭಟನೆಯ ಸೋಗಿನಲ್ಲಿ ಸುಳ್ಳು ಆರೋಪ ಮಾಡಿ ಸಚಿವರ ವರ್ಚಸ್ಸಿಗೆ ಧಕ್ಕೆ ತರುತ್ತಿರುವ ಜಿಲ್ಲೆಯ ಕೆಲ ಬಿಜೆಪಿ ಮುಖಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ರ‍್ಯಾಲಿಯುದ್ದಕ್ಕೂ ಬಿಜೆಪಿ ಸಂಸದ ಪ್ರಹ್ಲಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಮುಖಂಡ ಅಮೃತ ದೇಸಾಯಿ, ಸೀಮಾ ಮಸೂತಿ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಯೋಗೀಶಗೌಡ ಸಹೋದರ ಗುರುನಾಥಗೌಡ ಗೌಡರ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಆರ್‌ಎಸ್‌ಎಸ್‌ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಎಸ್.ಆರ್.ಮೋರೆ, ಶಾಸಕ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಪಾಲಿಕೆ ಸದಸ್ಯರಾದ ದೀಪಕ್ ಚಿಂಚೋರೆ, ಯಾಸೀನ ಹಾವೇರಿಪೇಟೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ, ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್‌ ಹಳ್ಳೂರ, ಆನಂದ ಸಿಂಗನಾಥ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಲ್ಲಪ್ಪ ಭಾವಿಕಟ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.