ADVERTISEMENT

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 5:09 IST
Last Updated 7 ಡಿಸೆಂಬರ್ 2017, 5:09 IST
ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರು ಬುಧವಾರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು
ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರು ಬುಧವಾರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ಗುತ್ತಿಗೆ ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬುಧವಾರ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದವರು ಪ್ರತಿಭಟನೆ ನಡೆಸಿದರು.

‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಶಿಫಾರಸು ಅನುಷ್ಠಾನಗೊಳಿಸಲು ವಿಫಲವಾಗಿದೆ. ಎರಡು ತಿಂಗಳಿನಿಂದ ಕಾರ್ಮಿಕರಿಗೆ ವೇತನ ಪಾವತಿ ಮಾಡಿಲ್ಲ. ಉಪಾಹಾರ ಭತ್ಯೆಯನ್ನೂ ನೀಡದೆ ಆಯುಕ್ತರು ಸರ್ಕಾರದ ಆದೇಶ ಉಲ್ಲಂಘಿಸಿದ್ದಾರೆ’ ಎಂದು ದೂರಿದರು.

‘ಕೆಲಸ ಮಾಡಲು ಪೌರ ಕಾರ್ಮಿಕರಿಗೆ ಸುರಕ್ಷಾ ಸಾಧನಗಳನ್ನು ನೀಡಿಲ್ಲ. ಸಮಸ್ಯೆಗಳಿಗೆ ಜನಪ್ರತಿನಿಧಿಗಳೂ ಸ್ಪಂದಿಸುತ್ತಿಲ್ಲ. ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರು ಜಿಲ್ಲೆಗೆ ನಾಲ್ಕು ಬಾರಿ ಭೇಟಿ ನೀಡಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆಸಿದ್ದರು. ಆಗ ಪೌರ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡುವಂತೆ ಹೇಳಿದ್ದರೂ ಪ್ರಯೋಜನವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ನಮ್ಮ ಸಮಸ್ಯೆಗಳನ್ನು ಆದಷ್ಟು ಬೇಗನೆ ಪರಿಹರಿಸಬೇಕು. ಇಲ್ಲವಾದರೆ ಅವಳಿನಗರದಲ್ಲಿ ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಿ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಸಫಾಯಿ ಕರ್ಮಚಾರಿಗಳ ಮೇಲ್ವಿಚಾರಣಾ ಸಮಿತಿ ಸದಸ್ಯ ವಿನಯ ಎಂ. ಗುಂಟ್ರಾಳ ಎಚ್ಚರಿಕೆ ನೀಡಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮು ಮೊರಬದ, ಗಂಗಮ್ಮ ಸಿದ್ರಾಮಪುರ, ನಾಗಮ್ಮ ಗೊಲ್ಲರ, ಕಸ್ತೂರೆವ್ವ ಬೆಳಗುಂದಿ, ಗಾಳೆಪ್ಪ ದ್ವಾಸಲಕೇರಿ, ಯಲ್ಲಮ್ಮ, ಸೋಮವ್ವ ಮೊರಬದ, ಪರಶುರಾಮ ಕಡಕೋಳ, ಬಸವರಾಜ ದೊಡ್ಡಮನಿ, ಕನಕಪ್ಪ ಕೊಟಬಾಗಿ, ಮಂಜುನಾಥ ನಾಗನೂರ, ಕಾಶೀನಾಥ ಮಸರಕಲ್ಲ, ಆನಂದ ಬಾವೂರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.