ADVERTISEMENT

ಸಮಾನ ಶಿಕ್ಷಣ ನೀತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2012, 8:10 IST
Last Updated 23 ಜುಲೈ 2012, 8:10 IST

ನವಲಗುಂದ: ಏಕರೂಪ ಹಾಗೂ ಸಮಾನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಕ.ಸಾ.ಪ.ತಾಲ್ಲೂಕು ಘಟಕದ ಪದಾಧಿಕಾರಿಗಳು ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರಕಾರ ಇತ್ತೀಚಿನ ವರ್ಷಗಳಲ್ಲಿ ಸುಮಾರು 10 ಸಾವಿರ ಕನ್ನಡ ಮಾಧ್ಯಮ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 341 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 6ನೇ ತರಗತಿಯಿಂದ ಸರ್ಕಾರವೇ ಆಂಗ್ಲ ಮಾಧ್ಯಮವನ್ನು ಆರಂಭಿಸುವ ಮೂಲಕ ಕನ್ನಡ ಹಿತಕ್ಕೆ ಧಕ್ಕೆ ಮಾಡುತ್ತಿದೆ ಎಂದು ಆರೋಪಿಸಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 6ನೇ ತರಗತಿಯಿಂದ ಪ್ರಾರಂಭಿಸಲು ಹೊರಡಿಸಿರುವ ಆದೇಶವನ್ನು ಕೂಡಲೇ ರದ್ದುಗೊಳಿಸಬೇಕು. ಅಕ್ರಮವಾಗಿ ಇಂಗ್ಲಿಷ್ ಮಾಧ್ಯಮ ಶಾಲೆ ನಡೆಸಿ ಮೋಸ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಸಿಬೇಕು. ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಈಗ ಜಾರಿಯಲ್ಲಿರುವಂತೆ ಒಂದು ಭಾಷೆಯಾಗಿ ಇಂಗ್ಲಿಷನ್ನು ಕಲಿಸುವ ಪದ್ಧತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಂ. ಮೆಣಸಿನಕಾಯಿ, ಗೌರವ ಕಾರ್ಯದರ್ಶಿಗಳಾದ ಜಿ.ಎನ್. ತೋಟದ, ವಿ.ಎಚ್. ಡಬರಿ, ಡಿ.ವಿ. ಕುರಹಟ್ಟಿ, ಎಸ್.ಬಿ. ಹಿರೇಮಠ, ಎಸ್.ಜಿ. ಭಜಂತ್ರಿ, ಎಂ.ಬಿ. ಪವಾಡಶೆಟ್ಟರ, ಸಂಜೀವಗೌಡ ಹಿರೇಗೌಡರ, ಎಂ.ಎಚ್. ನಿಡವಣಿ, ಎಂ.ಎಸ್. ಕೊಪ್ಪದ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಹಶೀಲ್ದಾರಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.