ಅಣ್ಣಿಗೇರಿ: ಪಟ್ಟಣದ ಅಭಿವೃದ್ಧಿಗೆ ನಮ್ಮ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. 4ನೇ ಹಂತದ ನಗರೋತ್ಥಾನ ಯೋಜನೆಯಡಿ ₹10 ಕೋಟಿ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಸಕ್ಕರೆ, ಕೈಮಗ್ಗ ಮತ್ತು ಜವಳಿ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ತಿಳಿಸಿದರು.
ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪಟ್ಟಣದ ಅಭಿವೃದ್ಧಿಗೆ ಸರ್ಕಾರ ಜಲಜೀವನ್ ಮಿಷನ್ ಯೋಜನೆಯಡಿ ₹54 ಕೋಟಿ ಅನುದಾನ ನೀಡಿದೆ. ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ₹5 ಕೋಟಿ, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ₹1 ಕೋಟಿ ವಿಶೇಷ ಅನುದಾನ ಮಂಜೂರಾಗಿದೆ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ 10 ಕೋಟಿ ಅನುದಾನ ನೀಡಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಸಿದೆ ಎಂದು ಹೇಳಿದರು.
‘ಮುಂಬರುವ ದಿನಗಳಲ್ಲಿ ನೀರಾವರಿ ಇಲಾಖೆಗೆ ಸಂಬಂಧಿಸಿದ ಕೆಲಸಕ್ಕಾಗಿ ₹20 ಕೋಟಿ ಅನುದಾನ ಸಿಗಲಿದೆ. ಜನರಿಗೆ ಸೂರು ಕಲ್ಪಿಸಲು ಭೂಮಿ ಖರೀದಿಗಾಗಿ ಹಣ ನೀಡುವಂತೆ ಸರ್ಕಾರಕ್ಕೆ ಕೋರಲಾಗಿದೆ. ಪುರಸಭೆ ವತಿಯಿಂದ ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಮೂಲಕ ಪಂಪನ ನಾಡಿನ ಕೀರ್ತಿಯನ್ನು ದೇಶದಾದ್ಯಂತ ಪಸರಿಸೋಣ’ ಎಂದರು.
ಮುಖಂಡರಾದ ಷಣ್ಮುಖ ಗುರಿಕಾರ, ಶಿವಾನಂದ ಹೊಸಳ್ಳಿ, ಶಿವಯೋಗಿ ಸುರಕೋಡ, ಸಿ.ಜಿ.ನಾವಳ್ಳಿ, ಜಗದೀಶ ಚವಡಿ, ಬಸವರಾಜ ಯಳವತ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.