ADVERTISEMENT

22 ಸಂಸದರು ದೆಹಲಿಗೆ: ಜೋಶಿ ವಾಗ್ದಾನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2014, 5:39 IST
Last Updated 1 ಮಾರ್ಚ್ 2014, 5:39 IST

ಹುಬ್ಬಳ್ಳಿ: ‘ಮುಂಬರುವ ಲೋಕ­ಸಭಾ ಚುನಾವಣೆಯಲ್ಲಿ ರಾಜ್ಯದಿಂದ ಬಿಜೆಪಿಯ 22ಕ್ಕೂ ಹೆಚ್ಚು ಸಂಸದರನ್ನು ಆಯ್ಕೆ ಮಾಡಿ ದೆಹಲಿಗೆ ಕಳುಹಿಸುವ ಭರವಸೆಯನ್ನು ನಾನು ಈ ಸಮಾವೇಶದ ಮೂಲಕ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ನೀಡುತ್ತೇನೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದರು.

‘ಭಾರತ ಗೆಲ್ಲಿಸಿ’ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ತಪ್ಪಿನಿಂದಾಗಿ ಮತಗಳು ವಿಭಜನೆಗೊಂಡವು. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂತು. ಆದರೆ, ಕಾಂಗ್ರೆಸ್‌ ಸರ್ಕಾರ ಇನ್ನೂ ‘ಟೇಕ್‌ ಆಫ್‌ ’ ಆಗಿಲ್ಲ ಎಂದು ಆ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ’ ಎಂದರು.

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ‘ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ತತ್ತರಿಸಿದ್ದು ಈ ಬಗ್ಗೆ ಯುಪಿಎ ಸರ್ಕಾರ ಚಕಾರ ಎತ್ತುತ್ತಿಲ್ಲ. ಯುಪಿಎ ಸರ್ಕಾರದ ಆರ್ಥಿಕ ನೀತಿಗಳು ಸರಿ ಇಲ್ಲ. ಹೀಗಾಗಿ ಭ್ರಷ್ಟಾಚಾರ, ಹಣದುಬ್ಬರದಂತಹ ಸಮಸ್ಯೆಗಳು ದೇಶವನ್ನು ಕಾಡುತ್ತಿವೆ. ಭಯೋತ್ಪಾದನೆ ಮಟ್ಟ ಹಾಕುವಲ್ಲಿಯೂ ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ಟೀಕಿಸಿದರು.

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ, ‘ಕೇಂದ್ರದಲ್ಲಿ ಈ ಬಾರಿ ಎನ್‌ಡಿಎ ಸರ್ಕಾರ ರಚನೆ ಮಾಡಲಿದ್ದು, ನರೇಂದ್ರ ಮೋದಿ ಪ್ರಧಾನಿಯಾಗುವುದರಲ್ಲಿ ಸಂಶಯವೇ ಇಲ್ಲ’ ಎಂದರು.

ಕಾಂಗ್ರೆಸ್‌ ಶಾಸಕರೇ ದಂಗೆ ಏಳುವ ಸ್ಥಿತಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದ್ದು, ಅವರ ವಿರುದ್ಧ ಕಾಂಗ್ರೆಸ್‌ ಶಾಸಕರೇ ದಂಗೆ ಏಳುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.

‘ಶಾಸಕರು ಸಿದ್ದರಾಮಯ್ಯ ಮಾತನ್ನೇ ಕೇಳುತ್ತಿಲ್ಲ’ ಎಂದು ಲೇವಡಿ ಮಾಡಿದರು.

‘ದೇಶಕ್ಕೆ ಸಮರ್ಥ ನಾಯಕತ್ವದ ಅಗತ್ಯವಿದೆ. ಇಂತಹ ನಾಯಕತ್ವ ನೀಡುವುದು ಮೋದಿ ಅವರಿಂದ ಮಾತ್ರ ಸಾಧ್ಯ. ಸ್ವಾತಂತ್ರ್ಯ ನಂತರ ಸಣ್ಣಪುಟ್ಟ ರಾಜ್ಯಗಳನ್ನು ಒಗ್ಗೂಡಿಸಿ ಅಖಂಡ ಭಾರತವನ್ನು ನಿರ್ಮಾಣ ಮಾಡಿದವರು ಗುಜರಾತ್‌ನವರಾದ ಸರದಾರ ವಲ್ಲಭಭಾಯ್ ಪಟೇಲ್‌. ಅದೇ ಗುಜರಾತಿನ ನರೇಂದ್ರ ಮೋದಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲು ಜನತೆ ಅವಕಾಶ ಮಾಡಿಕೊಡಬೇಕು’ ಎಂದರು.

ಮಾಜಿ ಸಚಿವ ಗೋವಿಂದ ಕಾರಜೋಳ, ಸಂಸದ ಶಿವಕುಮಾರ ಉದಾಸಿ ಮಾತನಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.