ADVERTISEMENT

23ರ ಭಾರತ್ ಬಂದ್ ಬೆಂಬಲಿಸಲು ಮನವಿ

ಬಡ್ತಿ ಮೀಸಲಾತಿ ಹಕ್ಕಲ್ಲ: ಸುಪ್ರೀಂ ತೀರ್ಪಿನ ವಿರುದ್ಧ ಸುಗ್ರೀವಾಜ್ಞೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2020, 20:15 IST
Last Updated 20 ಫೆಬ್ರುವರಿ 2020, 20:15 IST

ಹುಬ್ಬಳ್ಳಿ: ಬಡ್ತಿ ಮೀಸಲಾತಿ ಮೂಲಭೂತ ಹಕ್ಕಲ್ಲ, ಅದು ರಾಜ್ಯಗಳ ವಿವೇಚನೆಗೆ ಬಿಟ್ಟದ್ದು ಎಂಬ ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ (ರಾವಣ) ಅವರು ಫೆಬ್ರುವರಿ 23ರಂದು ಕರೆ ನೀಡಿರುವ ಭಾರತ್‌ ಬಂದ್‌ಗೆ ಹುಬ್ಬಳ್ಳಿ– ಧಾರವಾಡದ ನಾಗರಿಕರು ಬೆಂಬಲ ನೀಡಬೇಕು ಎಂದು ವಿವಿಧ ದಲಿತ ಸಂಘಟನೆಗಳ ಮಹಾಮಂಡಳ ಮನವಿ ಮಾಡಿದೆ. ಅಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಬೃಹತ್ ಮೆರವಣಿಗೆ ನಡೆಸಲು ಮಹಾಮಂಡಳ ನಿರ್ಧರಿಸಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಪಿತ್ರಾಂಬಪ್ಪ ಬಿಳಾರ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಮೀಸಲಾತಿ ಹಕ್ಕಲ್ಲ ಎಂಬ ಸುಪ್ರೀಂ ಕೋರ್ಟ್‌ ತೀರ್ಪಿನಿಂದ ಈ ವರ್ಗಗಳು ಇನ್ನಷ್ಟು ಸಂಕಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ಸರ್ಕಾರದ ಗಮನ ಸೆಳೆಯಲು ಕರೆ ನೀಡಿರುವ ಬಂದ್‌ಗೆ ಶಾಲಾ– ಕಾಲೇಜುಗಳು, ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರ ಬೆಂಬಲ ನೀಡಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮುಖಂಡ ಗುರುನಾಥ ಉಳ್ಳಿಕಾಶಿ ಮಾತನಾಡಿ, ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈ ಕೂಡಲೇ ಸುಗ್ರೀವಾಜ್ಞೆ ಹೊರಡಿಸಬೇಕು. ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಮೇಲೆ ತೀರ್ಪು ವ್ಯತಿರಿಕ್ತ ಪರಿಣಾಮ ಬೀರಲಿದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣದ ಈ ಸಂದರ್ಭದಲ್ಲಿ ಸರ್ಕಾರಿ ಹುದ್ದೆಗಳ ಬಡ್ತಿಯಲ್ಲಿ ಮೀಸಲಾತಿ ಕಾಯ್ದುಕೊಳ್ಳುವುದು ಅತ್ಯಗತ್ಯವಾಗಿದೆ ಎಂದರು.

ADVERTISEMENT

ಬಂದ್‌ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿವೆ. ಬಲವಂತವಾಗಿ ಬಂದ್ ಮಾಡಿಸುವುದಿಲ್ಲ. ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ನೀಡಬೇಕು ಎಂದು ಮನವಿ ಮಾಡುತ್ತೇವೆ ಎಂದು ಹೇಳಿದರು. ಮುಖಂಡರಾದ ವೆಂಕಟೇಶ ಮೇಸ್ತ್ರಿ, ಗಣೇಶ್ ಟಗರಗುಂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.