ADVERTISEMENT

42ನೇ ರೈತ ಹುತಾತ್ಮ ದಿನಾಚರಣೆ, ಸಮಾವೇಶ 21ರಂದು -ಬಡಗಲಪುರ ನಾಗೇಂದ್ರ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 14:51 IST
Last Updated 19 ಜುಲೈ 2022, 14:51 IST
ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ   

ಹುಬ್ಬಳ್ಳಿ: ಗದಗ ಜಿಲ್ಲೆಯ ನರಗುಂದದ ಮಹದಾಯಿ ಹೋರಾಟ ವೇದಿಕೆಯಲ್ಲಿ ಜುಲೈ 21ರಂದು 42ನೇ ರೈತ ಹುತಾತ್ಮ ದಿನಾಚರಣೆ ಮತ್ತು ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನರಗುಂದ –ನವಲಗುಂದ ಬಂಡಾಯ ನಡೆದು 42 ವರ್ಷಗಳಾಗಿವೆ. ಈ ಅಂಗವಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲಕ ಪ್ರೊ.ಯೋಗೇಂದ್ರ ಯಾದವ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಭಾಗವಹಿಸಲಿದ್ದಾರೆ. 10 ಸಾವಿರ ಜನ ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ರೈತರ ಒತ್ತಡಕ್ಕೆ ಮಣಿದು ವಾಪಸ್ ಪಡೆದಿದೆ. ಅದೇ ರೀತಿ ರಾಜ್ಯ ಸರ್ಕಾರವೂ ಕೂಡಲೇ ವಾಪಸ್ ಪಡೆಯಬೇಕು. ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಗಳು ರೈತರ ಪಾಲಿಗೆ ಕರಾಳವಾಗಿವೆ ಎಂದು ಹೇಳಿದರು.

ADVERTISEMENT

ಮಹದಾಯಿ ಹೋರಾಟ ಎಂಟು ವರ್ಷಗಳಿಂದ ನಡೆಯುತ್ತಿದ್ದರೂ ಸರ್ಕಾರ ಅದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತಿಲ್ಲ. ಸರ್ಕಾರ ಕೂಡಲೇ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಆಹಾರ ಧಾನ್ಯಗಳ ಮೇಲೆ ಜಿಎಸ್‌ಟಿ ವಿಧಿಸಿರುವುದು ಖಂಡನೀಯ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿವೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಾವೇಶ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ಶಾಶ್ವತ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಿರುವ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಸಮಾವೇಶದಲ್ಲಿ ಗೊತ್ತುವಳಿ ಮಂಡಿಸಲಾಗುವುದು ಎಂದು ಹೇಳಿದರು.

ವೆಂಕನಗೌಡ ಪಾಟೀಲ, ಮಲ್ಲಣ್ಣ ಆಲೇಕಾರ, ಬಿ.ಎಸ್.ಸೊಪ್ಪಿನ, ಈರಣ್ಣ ಬಳಿಗೇರ, ನಾಗಪ್ಪ ಉಂಡಿ, ಗುರು ರಾಯನಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.