ಧಾರವಾಡ: ‘ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆಹಾರ ಪದಾರ್ಥಗಳ ಮೇಲೆ ನಿಗಾವಹಿಸಬೇಕು. ಉತ್ತಮ ಆಹಾರ ಪದ್ಧತಿ ಮತ್ತು ಜೀವನಶೈಲಿ ರೂಢಿಸಿಕೊಳ್ಳಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಲೂರು ವೆಂಕಟರಾವ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ರಾಷ್ಟ್ರೀಯ ಪೋಷಣ್ ಮಾಸಾಚರಣೆಯಲ್ಲಿ ಅವರು ಮಾತನಾಡಿದರು.
‘ಪ್ಲಾಸ್ಟಿಕ್ ವಸ್ತುಗಳನ್ನು ಬಳುಸುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ರಾಸಾಯನಿಕ ಬಳಸಿದ ಆಹಾರ ಸೇವಿಸುವುದರಿಂದ ಜನರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹಣ್ಣು, ತರಕಾರಿ, ಸೊಪ್ಪು ಹಾಗೂ ಸಿರಿಧಾನ್ಯಗಳಲ್ಲಿ ಪೌಷ್ಟಿಕಾಂಶ ಇರುತ್ತದೆ. ಅವುಗಳ ಸೇವನೆ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ’ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಕೆ.ಎನ್. ತನುಜಾ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್. ಕುಕನೂರ, ನವಲಗುಂದ ತಾಲ್ಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಲಲಿತಾ. ಎನ್., ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರಶಾಂತ ದೇವರಮನಿ, ಮುತ್ತಣ್ಣ ಸಿ.ಎ, ಉಮಾ ಬಳ್ಳೊಳ್ಳಿ, ಡಾ. ರಾಜೇಶ್ವರಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.