ADVERTISEMENT

ಅಮಿತ್ ಶಾ ರಾಜೀನಾಮೆ ನೀಡಲಿ: ಎಸ್‌.ಆರ್‌. ಹಿರೇಮಠ

ಜೆಎನ್‌ಯು ವಿದ್ಯಾರ್ಥಿಗಳು, ಪ್ರಾಧ್ಯಾಪಕರ ಮೇಲೆ ಹಲ್ಲೆ ವಿಚಾರ

​ಪ್ರಜಾವಾಣಿ ವಾರ್ತೆ
Published 7 ಜನವರಿ 2020, 10:24 IST
Last Updated 7 ಜನವರಿ 2020, 10:24 IST
ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ
ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ   

ಹುಬ್ಬಳ್ಳಿ: ‘ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ರಾತ್ರೊ ರಾತ್ರಿ ಪುಂಡರ ಗುಂಪು ನಡೆದಿರುವ ಹಲ್ಲೆಗೆ ಸಂಬಂಧಿಸಿದಂತೆ, ಗೃಹ ಸಚಿವ ಅಮಿತ್ ಶಾ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್. ಹಿರೇಮಠ ಒತ್ತಾಯಿಸಿದರು.

‘ಗುಂಪೊಂದು ವಿ.ವಿ.ಗೆ ನುಗ್ಗಿ ನಡೆಸಿರುವ ಗೂಂಡಾಗಿರಿ ದೇಶವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಪ್ರಕರಣದಲ್ಲಿ ಪೊಲೀಸರು ಮೂಕಪ್ರೇಕ್ಷಕರಾಗಿದ್ದದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕೂಡಲೇ ಕಾನೂನು ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿರುವುದು ಮೇಲ್ನೊಟಕ್ಕೆ ದೃಢಪಟ್ಟಿದೆ’ ಎಂದು ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಕೇಂದ್ರ ಸರ್ಕಾರ ಹಿಂಸೆಯ ಮೂಲಕ ಹತ್ತಿಕ್ಕುತ್ತಿದೆ. ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆಯೂ ಇದರ ಒಂದು ಭಾಗವಾಗಿದೆ. ಇದು 1930ರಲ್ಲಿ ಹಿಟ್ಲರ್ ಜರ್ಮನಿಯಲ್ಲಿ ನಡೆಸಿದ ದಬ್ಬಾಳಿಕೆಯನ್ನು ನೆನೆಪಿಸುತ್ತಿದೆ’ ಎಂದು ಟೀಕಿಸಿದರು.

ADVERTISEMENT

ನೇಮಕಾತಿ ರದ್ದುಗೊಳಿಸಿ

‘ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಡಾ. ಸುಧೀಂದ್ರ ರಾವ್ ಅವರ ನೇಮಕ ಕಾನೂನುಬಾಹಿರವಾಗಿದೆ. ಹಾಗಾಗಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ನೇಮಕಾತಿಯನ್ನು ಕೂಡಲೇ ರದ್ದುಗೊಳಿಸಬೇಕು’ ಎಂದು ಹಿರೇಮಠ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.