ADVERTISEMENT

ಹುಬ್ಬಳ್ಳಿ | 'ಗೋ ಬ್ಯಾಕ್ ಅಮಿತ್ ಶಾ': ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 6:57 IST
Last Updated 28 ಜನವರಿ 2023, 6:57 IST
   

ಹುಬ್ಬಳ್ಳಿ: 'ಮಹದಾಯಿ ಯೋಜನೆ ಹಾಗೂ ಕೃಷ್ಣಾ ನೀರಾವರಿ ಯೋಜನೆ ಅನುಷ್ಠಾನ, ಸ್ವಾಮಿನಾಥನ್ ಆಯೋಗ ವರದಿ ಜಾರಿಗೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರು ಶನಿವಾರ ನಗರದ ದುರ್ಗದ ಬೈಲ್'ನಲ್ಲಿ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಭಾವಚಿತ್ರ ಸುಟ್ಟು, 'ಗೋ ಬ್ಯಾಕ್ ಅಮಿತ್ ಶಾ' ಎಂದು ಘೋಷಣೆ ಕೂಗಿದರು.

ಸಮಿತಿ ಅಧ್ಯಕ್ಷ ಸಿದ್ದುತೇಜಿ ಮಾತನಾಡಿ, 'ಸ್ವಾಮಿನಾಥನ್‌ ಆಯೋಗದ ವರದಿ ಜಾರಿ ಮಾಡುವುದರಿಂದ ರೈತರಿಗೆ ಅನುಕೂಲವಾಗಲಿದೆ. ಬೆಳೆಗೆ ಬೆಂಬಲ ಬೆಲೆ ಇಲ್ಲದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬಿಜೆಪಿ ನಾಯಕರು ಮಹದಾಯಿ ಯೋಜನೆಯ ಡಿಪಿಆರ್'ಗೆ ಒಪ್ಪಿಗೆ ಸಿಕ್ಕಿದೆ ಎಂದು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅರಣ್ಯ ಇಲಾಖೆಯಿಂದ ಈವರೆಗೂ ಅನುಮತಿ ದೊರೆತಿಲ್ಲ. ಕೃಷ್ಣಾ ನದಿಯ ಎಡದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ. ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

ADVERTISEMENT

'ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ರಾಜ್ಯಕ್ಕೆ ಆಗಾಗ ಭೇಟಿ ನೀಡುತ್ತಿರುವುದು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಅಲ್ಲ. ಅದು ನೆಪಮಾತ್ರವಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಹಣ ಹಂಚಲು ಅವರು ಬರುತ್ತಿದ್ದಾರೆ. ಅವರು ಬರುವ ವಿಮಾನವನ್ನು‌ ಚುನಾವಣಾಧಿಕಾರಿಗಳು ಪರಿಶೀಲಿಸಬೇಕು' ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕುಬೇರ ಪವಾರ್, ಬಾಬಾಜಾನ್ ಮುಧೋಳ್, ರಮೇಶ ಭೋಸ್ಲೆ, ಆನಂದ ದಲಬಂಜನ್, ರಾಜು ನಾಯಕವಾಡಿ, ಎ.ಎಸ್. ಪೀರಜಾದೆ, ಬಿ.ಎ. ಮುಧೋಳ, ರಬ್ಬಾಣಿ, ಶೋಭಾ ಕಮ್ತರ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.