ನವಲಗುಂದ: ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ವಹಿಸಬೇಕು ಎಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಒತ್ತಾಯಿಸಿದರು.
ಈ ಕುರಿತು ತಹಶೀಲ್ದಾರ್ ಕಚೇರಿ ಪ್ರಥಮ ದರ್ಜೆ ಸಹಾಯಕ ನಾಗರಾಜ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೊಲೆ ನಡೆದಿರುವುದು ಇಡೀ ಸಮಾಜವನ್ನು ಬೆಚ್ಚಿ ಬಿಳಿಸಿದೆ. ಅವಳಿ ನಗರದಲ್ಲಿ ಈ ಕೊಲೆಗಳು ನಡೆದಿರುವುದು ಪೊಲೀಸ್ ಇಲಾಖೆಯ ವೈಫಲ್ಯ ಹಾಗೂ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದರು.
ರೈತ ಮುಖಂಡ ಬಸನಗೌಡ ಪಾಟೀಲ ಮಾತನಾಡಿ ‘ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದ ಧಾರವಾಡ ಜಿಲ್ಲೆಯಲ್ಲಿ ಒಂದು ತಿಂಗಳ ಅಂತರದಲ್ಲಿ ಎರಡು ಕೊಲೆಗಳು ನಡೆದಿವೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರಾಜ್ಯ ಸರ್ಕಾರ ಸಾಮಾನ್ಯ ಜನರಿಗೆ ರಕ್ಷಣೆ ಕೊಡುವಲ್ಲಿ ವಿಫಲವಾಗಿದೆ’ ಆಕ್ರೋಶ ವ್ಯಕ್ತಪಡಿಸಿದರು.
ರಿಯಾಜ್ ಅಹ್ಮದ್ ನಾಶಿಪುಡಿ ಮಾತನಾಡಿ, ರಾಜ್ಯ ಸರ್ಕಾರ ಈ ಎರಡು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಹೆಣ್ಣು ಮಕ್ಕಳ ರಕ್ಷಣೆಗಾಗಿ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡ ಮಲ್ಲಿಕಾರ್ಜುನಸ್ವಾಮಿ ಮಠಪತಿ, ಬುಡ್ನಾಸಾಬ ನರಗುಂದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.