ಅಣ್ಣಿಗೇರಿ: ‘ನಿಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಕ್ಕಳು, ಮಹಿಳೆಯರು ಕಳ್ಳಸಾಗಾಣಿಕೆಯಾಗಿದ್ದರೆ ತಕ್ಷಣ ಸಂಬಂಧಿಸಿದ ಇಲಾಖೆಯ ಗಮನಕ್ಕೆ ತರಬೇಕು’ ಎಂದು ಸಿಡಿಪಿಒ ಗಾಯತ್ರಿ ಪಾಟೀಲ ಹೇಳಿದರು.
ಪಟ್ಟಣದ ಅಮೃತೇಶ್ವರ ದೇವಸ್ಥಾನದ ಬಯಲಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆಯಲ್ಲಿ ಅವರು ಮಾತನಾಡಿದರು.
‘ಕಳ್ಳ ಸಾಗಾಣಿಕೆ ಜಾಲವು ಮಹಿಳೆಯರನ್ನು ಅಪಹರಿಸಿ ವೇಶ್ಯಾವಾಟಿಕೆಗೆ ಹಾಗೂ ಮಕ್ಕಳನ್ನು ಅಪಹರಿಸಿ ಭಿಕ್ಷಾಟನೆಗೆ ಒಳಪಡಿಸುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಇಂತಹ ದುರ್ಘಟನೆಗೆ ಅವಕಾಶ ನೀಡದೆ ಸಂಬಂಧಿಸಿದ ಇಲಾಖೆಯ ಜತೆಗೆ ಸಹಕರಿಸಬೇಕು‘ ಎಂದು ಮನವಿ ಮಾಡಿದರು.
ತಹಶೀಲ್ದಾರ್ ರಾಜು ಮಾವರ್ಕರ ಮಾತನಾಡಿ, ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಂತಹ ಪ್ರಕರಣಗಳು ಕಂಡುಬಂದರೆ ಕೂಡಲೆ ತಾಲ್ಲೂಕು ಆಡಳಿತದ ಗಮನಕ್ಕೆ ತರಬೇಕು. ಮಾನವ ಕಳ್ಳ ಸಾಗಾಣಿಕೆ ಕುರಿತು ತಾಲ್ಲೂಕುಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಬಹಳ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣದ ಅಮೃತೇಶ್ವರ ದೇವಸ್ಥಾನದ ಬಯಲಿನಲ್ಲಿ ಮಾನವ ಕಳ್ಳ ಸಾಗಾಣಿಕೆ ದಿನ ತಡೆಗಟ್ಟುವ ಕುರಿತು ಮಾನವ ಸರಪಳಿ ನಿರ್ಮಿಸಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಪುರಸಭೆ ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ, ಹಿರಿಯ ಮೇಲ್ವಿಚಾರಕಿ ಲಕ್ಷ್ಮಿ ನ್ಯಾಮನಗೌಡ್ರ, ರೇಣುಕಾ ಮರುಳಸಿದ್ದಯ್ಯನ ಮಠ, ತುಳಸಾ ಮಳಲಿ, ಅಕ್ಕಮ್ಮ ಹಿರೇಹೋಳಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.