ಹುಬ್ಬಳ್ಳಿ: ‘ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯ ಹಾಗೂ ಅದರ ಸ್ಥಾಪಕರ ಧ್ಯೇಯೋದ್ಧೇಶ ಏನೆಂದು ತಿಳಿದು ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಲಿ. ಅಸಂಬದ್ಧವಾಗಿ ಹೇಳಿಕೆ ನೀಡುವುದು ಅವರಿಗೆ ಶೋಭೆಯಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಪ್ರಿಯಾಂಕ್ ಅವರು ಆರ್‌ಎಸ್‌ಎಸ್ ಬಗ್ಗೆ ನಕಾರಾತ್ಮಕ ಭಾವನೆ ತುಂಬಿಕೊಂಡಿದ್ದಾರೆ. ಸಂಘದ ಸಾಹಿತ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಹಾಗೂ ಬುನಾದಿ ಗಟ್ಟಿ ಮಾಡಲು ಸಂಘ ಹೇಗೆ ಶ್ರಮಿಸುತ್ತಿದೆ ಎನ್ನುವುದನ್ನು ತಿಳಿದು ಮಾತನಾಡಲಿ’ ಎಂದರು.
‘ಬಿ.ಕೆ.ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಗೌರವ ಇಲ್ಲವಾಗಿದೆ. ಹಿಂದೂ ಸಂಘಟನೆ ಹಾಗೂ ಆರ್‌ಎಸ್‌ಎಸ್‌ಗೆ ಬೈದರೆ ಮಾತ್ರ ಸ್ಥಾನಮಾನ ಸಿಗುತ್ತದೆ ಎಂದು, ಹುಚ್ಚರ ಹಾಗೆ ಮಾತನಾಡುತ್ತಿದ್ದಾರೆ’ ಎಂದು ಹರಿಹಾಯ್ದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಆರ್.ವಿ.ದೇಶಪಾಂಡೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬೆಲ್ಲದ, ‘ಅವರು ಅನುಭವಸ್ಥ ರಾಜಕಾರಣಿಯಾಗಿದ್ದು, ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ರಾಜ್ಯ ಸರ್ಕಾರದಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ. ಅದು ನಿಂತರೆ ರಾಜ್ಯದ ಅಭಿವೃದ್ಧಿಯಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.