ಹುಬ್ಬಳ್ಳಿ: ‘ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಂದೆಡೆ ರೈತರು ರಸಗೊಬ್ಬರ ಸಿಗದೆ ಪರದಾಡುತ್ತಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಎಐಸಿಸಿ ರಾಜ್ಯ ಉಸ್ತುವಾರಿಗಳೊಂದಿಗೆ ಶಾಸಕರ ಜತೆ ಸಭೆ ನಡೆಸಲು ಮುಂದಾಗಿದ್ದಾರೆ. ಇದು ಖಂಡನೀಯ’ ಎಂದರು.
‘ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಆಯಾ ಜಿಲ್ಲೆ, ತಾಲ್ಲೂಕುಗಳಲ್ಲಿ ರೈತರಿಗೆ ಅವಶ್ಯ ಇರುವಷ್ಟು ಗೊಬ್ಬರ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ರೈತರಿಗೆ ಸಮರ್ಪಕವಾಗಿ ಗೊಬ್ಬರ ಸಿಗುವವರೆಗೂ ಹೋರಾಟ ನಡೆಸಲಾಗುವುದು’ ಎಂದರು.
‘ಸಬ್ಸಿಡಿ ಸಹಿತ, ರಹಿತವಾದ ಯಾವುದೇ ಗೊಬ್ಬರ ವಿತರಣೆ ಮಾಡುವ ಸಂದರ್ಭದಲ್ಲಿ ಸಬ್ಸಿಡಿ ರಹಿತವಾಗಿ ಯಾವುದೇ ಕ್ರಿಮಿನಾಶಕವನ್ನು ಖರೀದಿಸುವಂತೆ ಒತ್ತಾಯ ಮಾಡುವುದು ಅಪರಾಧ. ಆದರೆ, ಪ್ರತಿ ಸೊಸೈಟಿಯಲ್ಲಿ ₹268 ದರದ ಒಂದು ಚೀಲ ಯೂರಿಯಾ ಗೊಬ್ಬರ ಖರೀದಿ ಮಾಡಬೇಕಾದರೆ, ₹500 ಮೊತ್ತದ ಇತರ ವಸ್ತುಗಳನ್ನು ಖರೀದಿ ಮಾಡುವಂತೆ ಒತ್ತಡ ಹಾಕಲಾಗುತ್ತಿದೆ’ ಎಂದು ಹೇಳಿದರು.
‘ಉತ್ತರ ಕರ್ನಾಟಕ ಭಾಗದಲ್ಲಿ ಪ್ರತಿ ವರ್ಷ ಶೇ 50ರಷ್ಟು ಕೊರತೆಯಾಗುತ್ತಿತ್ತು. ಆದರೆ, ಈ ವರ್ಷ ಉತ್ತಮ ಮಳೆಯಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಮಂಡಿಸಿದರು. ಹೀಗಾಗಿ ರಸಗೊಬ್ಬರವನ್ನು ಕಾಳಸಂತೆಯಲ್ಲಿ ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ’ ಎಂದರು.
‘ರಾಜ್ಯಕ್ಕೆ ಎಷ್ಟು ಗೊಬ್ಬರದ ಅವಶ್ಯಕತೆ ಇದೆ ಎಂಬುದು ರಾಜ್ಯದ ಮುಖ್ಯಮಂತ್ರಿಗೆ ಗೊತ್ತಿಲ್ಲ. ಈ ವಿಷಯದಲ್ಲಿ ಎಪಿಎಂಸಿ ಸಚಿವ, ಕೃಷಿ ಸಚಿವ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಒಂದೊಂದು ಅಂಕಿಅಂಶ ನೀಡುತ್ತಾರೆ’ ಎಂದು ದೂರಿದರು.
‘ರೈತರು ಗೊಬ್ಬರಕ್ಕಾಗಿ ಮಳೆಯಲ್ಲಿ ಸರತಿಯಲ್ಲಿ ನಿಲ್ಲುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಯಾವುದೇ ಸಭೆ ನಡೆಸಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಂಡಿಲ್ಲ. ಕೃಷಿ ಸಚಿವ ಚಲುವರಾಯಸ್ವಾಮಿ ಮಂಡ್ಯ ಜಿಲ್ಲೆ ಬಿಟ್ಟು ರಾಜ್ಯದ ಯಾವುದೇ ಜಿಲ್ಲೆಗಳಿಗೆ ಹೋಗಿ ಪ್ರಗತಿ ಪರಿಶೀಲನಾ ಸಭೆ ನಡೆಸಿಲ್ಲ’ ಎಂದು ಆರೋಪಿಸಿದರು.
‘ಮಳೆ ಬಂದಾಗ ಮೇಲುಗೊಬ್ಬರವಾಗಿ ಯೂರಿಯಾ ಹಾಕುತ್ತಾರೆ. ಮಳೆ ಇಲ್ಲದಿದ್ದಾಗ ಯೂರಿಯಾ ಹಾಕಿದರೆ ಬೆಳೆ ನಾಶವಾಗುತ್ತದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕೂಡಲೇ ಗೊಬ್ಬರ ವಿತರಿಸಬೇಕು. ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ಮಾಡುವ ಪ್ರಕರಣದಲ್ಲಿ ಶಾಮೀಲಾಗಿರುವವರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಅಗತ್ಯಕ್ಕಿಂತ ಹೆಚ್ಚು ಗೊಬ್ಬರ ದಾಸ್ತಾನು ಇದೆ ಎಂಬುದಾಗಿ ಅಧಿಕಾರಿಗಳು ಹೇಳುತ್ತಾರೆ. ಆದರೆ ವಾಸ್ತವದಲ್ಲಿ ಅಷ್ಟು ಇಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ
-ಎ.ಎಸ್.ಪಾಟೀಲ ನಡಹಳ್ಳಿ ಅಧ್ಯಕ್ಷ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.