ಹುಬ್ಬಳ್ಳಿ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಪ್ರಕ್ರಿಯೆ ಆರಂಭವಾಗಿದ್ದು, ನಮ್ಮ ಪಕ್ಷದ ಪ್ರಮುಖರು ಸರ್ವೆ ಕಾರ್ಯ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಹಾದಿ ತಪ್ಪಿಸಿವೆ. ನೆರೆ ಪರಿಹಾರ ನಿರ್ವಹಣೆ, ನಿರಂತರ ಇಂಧನ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾಗಿವೆ. ಎರಡೂ ಸರ್ಕಾರಗಳ ವೈಫಲ್ಯಗಳನ್ನು ಜನರ ಮುಂದಿಟ್ಟು ಮತಯಾಚಿಸುತ್ತೇವೆ. 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ’ ಎಂದರು.
‘ಪಕ್ಷವನ್ನು ತಳಮಟ್ಟದಿಂದ ಸಂಘಟಿತಗೊಳಿಸಲು 50 ಲಕ್ಷ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ. ಬೂತ್ ಮಟ್ಟದಲ್ಲಿ ಹೆಚ್ಚು ಸದಸ್ಯರನ್ನು ಮಾಡಲಾಗುವುದು. ಇತ್ತೀಚಿಗೆ ನಡೆದ ವಿಧಾನಸಭಾ ಕ್ಷೇತ್ರಗಳ ಎರಡು ಉಪಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಶೀಘ್ರವಾಗಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆಸಿದರೂ ಇದೇ ಸಾಧನೆ ಮಾಡುತ್ತೇವೆ. ಸೋಲಿನ ಭಯದಿಂದ ಸರ್ಕಾರ ಚುನಾವಣೆಗೆ ಮುಂದಾಗಲು ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿದರು.
‘ಮೇಕೆದಾಟು ಯೋಜನೆ ಜಾರಿಗಾಗಿ ಡಿ. 9ರಿಂದ ಮೈಸೂರಿನಿಂದ ಬೆಂಗಳೂರಿನ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು. ಯಾತ್ರೆಯ ಕೊನೆಯ ದಿನ ರಾಜಧಾನಿಯಲ್ಲಿ ಸಮಾವೇಶ ನಡೆಯಲಿದ್ದು, ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಈ ಹೋರಾಟ ಕೇವಲ ಕಾಂಗ್ರೆಸ್‌ಗೆ ಸೇರಿದ್ದಲ್ಲ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುವುದು. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ನಮ್ಮ ಅಧ್ಯಕ್ಷರು ಎಲ್ಲ ಪಕ್ಷಗಳ ಶಾಸಕರಿಗೆ ಪತ್ರ ಬರೆದಿದ್ದಾರೆ’ ಎಂದರು.
ಅಧಿಕಾರದಲ್ಲಿದ್ದಾಗ ಮೇಕೆ ತಿಂದವರು ಈಗ ಪಾದಯಾತ್ರೆ ಮಾಡುತ್ತಿದ್ದಾರೆ ಎನ್ನುವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಟಿ. ರವಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಲೀಂ ಅಹ್ಮದ್ ‘ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯಲ್ಲಿದ್ದುಕೊಂಡು ರವಿ ಹೇಳಿಕೆ ಬಾಲಿಶತನದಿಂದ ಕೂಡಿದೆ’ ಎಂದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮುಖಂಡರಾದ ಸದಾನಂದ ಡಂಗನವರ, ಎನ್.ಎಚ್. ಕೋನರಡ್ಡಿ, ಇಮ್ರಾನ್ ಯಲಿಗಾರ, ಎಂ.ಎಸ್. ಅಕ್ಕಿ, ವಸಂತ ಲದ್ವಾ, ಜಗದೀಶ ಉಪ್ಪಿನ, ಅರವಿಂದ ಕಟಗಿ, ಮುಜಾಹಿದ್ದೀನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.