ADVERTISEMENT

ಬಿಜೆಪಿ ಜನಜಾಗೃತಿ ಮಹಾ ಸಮಾವೇಶ 18ಕ್ಕೆ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮುಖ್ಯ ಭಾಷಣ

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 9:48 IST
Last Updated 14 ಜನವರಿ 2020, 9:48 IST
ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ಬಿಜೆಪಿ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದರು –ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ಬಿಜೆಪಿ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದರು –ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಜ.18ರಂದು ಸಂಜೆ 4ಕ್ಕೆ ನಗರದ ನೆಹರೂ ಮೈದಾನದಲ್ಲಿ ಬಿಜೆಪಿ ಆಯೋಜಿಸಿರುವ ಜನಜಾಗೃತಿ ಮಹಾಸಮಾವೇಶಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿನ ದೇಶಪಾಂಡೆ ನಗರದ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರತಿ ಮನೆಯಿಂದ ಒಬ್ಬರನ್ನು ಸಮಾವೇಶಕ್ಕೆ ಕರೆತರುವಂತೆ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮನವಿ ಮಾಡಿದರು.

ದೇಶದೊಳಗೆ ಅಕ್ರಮವಾಗಿ ನುಸುಳಿರುವವರನ್ನು ಹಾಗೂ ಭಯೋತ್ಪಾದಕರನ್ನು ನಿಯಂತ್ರಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಗೃಹ ಸಚಿವ ಅಮಿತ್‌ ಶಾ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.

ADVERTISEMENT

ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌, ಎಡಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುವ ಭರದಲ್ಲಿ ಈ ದೇಶವನ್ನು ವಿರೋಧಿಸುತ್ತಿವೆ ಎಂದು ಆರೋಪಿಸಿದರು.

ಅಪಪ್ರಚಾರ

ಸಚಿವ ಜಗದೀಶ ಶೆಟ್ಟರ್‌ ಮಾತನಾಡಿ, ಕಾಯ್ದೆ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಯಾವುದೇ ಕಾರಣಕ್ಕೂ ಮುಸ್ಲಿಮರು ಕಾಂಗ್ರೆಸ್‌ನ ಅಪಪ್ರಚಾರಕ್ಕೆ ಕಿವಿಗೊಡಬಾರದು. ದೇಶದ ಯಾವೊಬ್ಬ ಮುಸ್ಲಿಮರಿಗೂ ಈ ಕಾಯ್ದೆಯಿಂದ ತೊಂದರೆಯಾಗುವುದಿಲ್ಲ ಎಂದು ಹೇಳಿದರು.

ಹುಬ್ಬಳ್ಳಿ, ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅರವಿಂದ ಬೆಲ್ಲದ ಮಾತನಾಡಿ, ಹುಬ್ಬಳ್ಳಿ ಸಮಾವೇಶವನ್ನು ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಶಾಸಕರಾದ ಸಿ.ಎಂ.ನಿಂಬಣ್ಣವರ, ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್‌ ಸದಸ್ಯರಾದ ಪ್ರದೀಪ ಶೆಟ್ಟರ್‌, ಎಸ್‌.ವಿ. ಸಂಕನೂರ, ಧಾರವಾಡ ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮುಖಂಡರಾದ ಮೋಹನ ಲಿಂಬಿಕಾಯಿ, ವೀರಭದ್ರಪ್ಪ ಹಾಲಹರವಿ, ಅಶೋಕ ಕಾಟವೆ, ಸೀಮಾ ಮಸೂತಿ, ನಾಗೇಶ ಕಲಬುರ್ಗಿ, ಈರಣ್ಣ ಜಡಿ, ಮಾ.ನಾಗರಾಜ, ಚಂದ್ರಶೇಖರ ಗೋಕಾಕ, ಸಂತೋಷ ಚವ್ಹಾಣ, ದತ್ತಮೂರ್ತಿ ಕುಲಕರ್ಣಿ, ರಂಗಾ ಬದ್ದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.