ADVERTISEMENT

ರಫೇಲ್‌: ರಾಹುಲ್‌ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2018, 12:01 IST
Last Updated 19 ಡಿಸೆಂಬರ್ 2018, 12:01 IST
ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಕಾರ್ಯಕರ್ತರು ಹುಬ್ಬಳ್ಳಿಯ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ
ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಕಾರ್ಯಕರ್ತರು ಹುಬ್ಬಳ್ಳಿಯ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ‘ರಫೇಲ್‌ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಕ್ಲೀನ್‌ ಚಿಟ್‌ ನೀಡಿದ್ದದೆ. ಆದರೂ ರಾಹುಲ್‌ ಗಾಂಧಿ ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರವನ್ನು ಟೀಕಿಸುವ ಮೂಲಕ ಜನರನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆ’ ಎಂದು ಟೀಕಿಸಿ ಬಿಜೆಪಿ ಕಾರ್ಯಕರ್ತರು ನಗರದ ತಹಶೀಲ್ದಾರ್‌ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಕಚೇರಿ ಎದುರು ಧರಣಿ ಕುಳಿತ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಕಾರ್ಯಕರ್ತರು, ‘ದಿಕ್ಕು ತಪ್ಪಿಸುವ ಹಾಗೂ ಪೂರ್ವಾಗ್ರಹ ಪೀಡಿತ ಹೇಳಿಕೆ ನೀಡುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಸೇನೆ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುತ್ತಿದ್ದಾರೆ. ರಫೇಲ್‌ ವಿಮಾನ ಖರೀದಿ ವಿಚಾರದಲ್ಲಿ ತಮಗೆ ಯಾವ ಸಂದೇಹವೂ ಇಲ್ಲ. ಈ ರಕ್ಷಣಾ ಖರೀದಿ ವ್ಯವಹಾರ ಪಾರದರ್ಶಕವಾಗಿಯೇ ನಡೆದಿದೆ’ ಎಂದು ಸುಪ್ರೀಂಕೋರ್ಟ್‌ ಡಿ 14ರಂದು ನೀಡಿದ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಅಷ್ಟಾಗಿಯೂ ರಾಹುಲ್‌ ಅವರು ರಫೇಲ್‌ ವಿವಾದದಲ್ಲಿ ಕೇಂದ್ರ ಸರ್ಕಾರವನ್ನು ಎಳೆದು ತರುತ್ತಿರುವುದು ಸರಿಯಲ್ಲ’ ಎಂದು ಟೀಕಿಸಿದರು.

‘ಒಬ್ಬ ಜನಪ್ರತಿನಿಧಿಯಾಗಿದ್ದುಕೊಂಡು ದೇಶದ ಭದ್ರತೆಗೆ ಧಕ್ಕೆ ತರುವ ಹೇಳಿಕೆ ನೀಡುತ್ತಿರುವ ರಾಹುಲ್‌ ಅವರ ಸದಸ್ವತ್ವವನ್ನು ರದ್ದುಗೊಳಿಸಬೇಕು’ ಎಂದು ಬಿಜೆಪಿ ಮುಖಂಡರು ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಪಕ್ಷದ ಮಹಾನಗರ ಜಿಲ್ಲಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಅಂಗಡಿ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.