ADVERTISEMENT

ಬ್ರೇಕ್ ಬದಲು ಆ್ಯಕ್ಸಿಲರೇಟರ್‌ ಒತ್ತಿದ ಮ್ಯಾನೇಜರ್: 9 ವಿದ್ಯಾರ್ಥಿನಿಯರಿಗೆ ಗಾಯ

ಕಾರು ಡಿಕ್ಕಿ: ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2019, 7:00 IST
Last Updated 26 ಜನವರಿ 2019, 7:00 IST
   

ಧಾರವಾಡ: ಇಲ್ಲಿಯ ಕೆಇ ಬೋರ್ಡ್ ಶಿಕ್ಷಣ ಸಂಸ್ಥೆಯ ಪಿಯುಸಿ ವಿದ್ಯಾರ್ಥಿನಿಯರು ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಕಾರವೊಂದು ಡಿಕ್ಕಿ ಹೊಡೆದ ಪರಿಣಾಮ 9 ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.

ಗಾಯಗೊಂಡವರ ಪೈಕಿ ಒಬ್ಬ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಕಾರು ಚಲಾಯಿಸಿಕೊಂಡು ಬರುತ್ತಿದ್ದ ವಿಜಯ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಅರವಿಂದ ಹೆಬಸೂರ ಅವರು ಬ್ರೇಕ್ ಹಾಕಲು ಹೋಗಿ ಆ್ಯಕ್ಸಿಲರೇಟರ್‌ ಒತ್ತಿದ್ದರಿಂದ ಈ ದುರಂತ ಸಂಭವಿಸಿದೆ.

ADVERTISEMENT

ಘಟನೆಯಲ್ಲಿ ಒಂಬತ್ತು ವಿದ್ಯಾರ್ಥಿನಿಯರ ಪೈಕಿ ಮೂವರಿಗೆ ಗಂಭೀರಗಾಯಗಳಾಗಿವೆ.ಪೂಜಾ ನಿಡಗುಂದಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ ಎಂದು ಧಾರವಾಡ ಸಂಚಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುರುಗೇಶ ಚನ್ನಣ್ಣವರ ತಿಳಿಸಿದರು.

ಪ್ರಕರಣ ಕುರಿತು ಧಾರವಾಡ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವಿಜಯ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಅರವಿಂದ ಹೆಬಸೂರ ಅವರನ್ನು ವಶಕ್ಕೆ ಪಡೆದುಕೊಳ‍್ಳಲಾಗಿದ್ದು, ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಶಿವಳ್ಳಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಸೇರಿದಂತೆ ಅನೇಕರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.