ADVERTISEMENT

ಹೆಸರು ಕಾಳು ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2022, 1:53 IST
Last Updated 27 ಆಗಸ್ಟ್ 2022, 1:53 IST
ಹೆಸರು ಕಾಳು ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಎನ್.ಎಚ್.ಕೋನರೆಡ್ಡಿ ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರ
ಹೆಸರು ಕಾಳು ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಎನ್.ಎಚ್.ಕೋನರೆಡ್ಡಿ ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರ   

ಧಾರವಾಡ: ಅತಿವೃಷ್ಟಿಯಿಂದಾಗಿ ಬೆಳೆಗಳು ಹಾನಿಗೀಡಾಗಿವೆ. ಇದರಿಂದ ರೈತರು ತೊಂದರೆಗೆ ಒಳಗಾಗಿದ್ದು, ಸರ್ಕಾರ ತಕ್ಷಣ ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಎನ್.ಎಚ್. ಕೋನರೆಡ್ಡಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಗುರುವಾರ ಮನವಿ ಸಲ್ಲಿಸಿದರು.

ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದರಿಂದ ರೈತರು ಸಾಲ ಮಾಡಿ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಬೆಳೆ ಬೆಳೆದಿದ್ದರು. ಆದರೆ, ಕಟಾವಿಗೆ ಬಂದ ಸಮಯದಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಶೇ 60 ಹೆಸರು ಬೆಳೆಗೆ ಹಾನಿಯಾಗಿದೆ. ಅಳಿದುಳಿದ ಬೆಳೆ ಕಟಾವು ಮಾಡಿರುವ ರೈತರಿಗೆ ಮಾರುಕಟ್ಟೆಯ ಬೆಲೆಯಿಂದಾಗಿ ಹೈರಾಣಾಗಿದ್ದಾರೆ. ಪ್ರತಿ ಕ್ವಿಂಟಾಲ್‌ಗೆ 4ರಿಂದ 5 ಸಾವಿರ ವರೆಗೆ ಖರೀದಿ ಮಾಡಲಾಗುತ್ತಿದೆ. ಇದರಿಂದ ಅನ್ನದಾತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.

ಆದ್ದರಿಂದ ಸರ್ಕಾರ ಖರೀದಿ ಕೇಂದ್ರ ಆರಂಭಿಸಿ, ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಾಲ್‌ಗೆ ₹7755 ರಂತೆ ಖರೀದಿಸಬೇಕು. ರೈತರ ಸಮಸ್ಯೆ ಗೊತ್ತಿದ್ದರೂ ಜನಪ್ರತಿನಿಧಿಗಳು ಖರೀದಿ ಕೇಂದ್ರ ಪ್ರಾರಂಭಿಸಲು ಮುಂದಾಗುತ್ತಿಲ್ಲ. ವಿಳಂಬ ನೀತಿ ಅನುಸರಿಸಿದರೆ ಜಿಲ್ಲೆಯಾದ್ಯಂತ ಹೋರಾಟ ಮಾಡುವುದು ಅನಿ
ವಾರ್ಯವಾಗಲಿದೆ. ಆದ್ದರಿಂದ ಸರ್ಕಾರ ಹೋರಾಟಕ್ಕೆ ಅವಕಾಶ ನೀಡದೆ ತಕ್ಷಣವೇ ಖರೀದಿ ಕೇಂದ್ರ ಸ್ಥಾಪಿಸಿ, ಬೆಂಬಲ ಬೆಲೆಯಡಿ ಹೆಸರು ಕಾಳು ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಬಾಬಾಜಾನ ಮಕಾನದಾರ, ಜೀವನ ಪವಾರ, ಎಂ.ಎಂ. ಠಾಣೇದ, ರಾಯೇಸಾಬ ಮುಳಗುಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.