ADVERTISEMENT

ಬಡವರ ಬದುಕಿನ ಮೇಲೆ ಕೇಂದ್ರ ಸರ್ಕಾರ ಆಕ್ರಮಣ: ಪಿ.ವಿ.‌ ಮೋಹನ್ ವಾಗ್ದಾಳಿ

ಧಾರವಾಡ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪಿ.ವಿ.‌ ಮೋಹನ್ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2022, 8:38 IST
Last Updated 20 ಜುಲೈ 2022, 8:38 IST
ಪಿ.ವಿ.‌ ಮೋಹನ್
ಪಿ.ವಿ.‌ ಮೋಹನ್   

ಹುಬ್ಬಳ್ಳಿ: ಕೇಂದ್ರ ಸರ್ಕಾರವು ಮಜ್ಜಿಗೆ, ಮೊಸರು, ಮಂಡಕ್ಕಿ, ಪೆನ್ಸಿಲ್ ಸೇರಿಂದತೆ ಅಗತ್ಯ ವಸ್ತುಗಳ ಮೇಲೆ ಜಿಎಸ್ ಟಿ ವ್ಯಾಪ್ತಿಗೆ ತರುವುದರ ಮೂಲಕ, ಬಡ‌ ಹಾಗೂ ಮಧ್ಯಮ ವರ್ಗದವರ ಮೇಲೆ ಬರೆ ಹಾಕಿದೆ. ಬಡವರ ಬದುಕಿನ ಮೇಲೆ ಆಕ್ರಮಣ ‌ಮಾಡುತ್ತಿದೆ ಎಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪಿ.ವಿ.‌ ಮೋಹನ್ ವಾಗ್ದಾಳಿ ಮಾಡಿದರು.

ಬಿಜೆಪಿಯ ಕಾರ್ಯಕ್ರಮಗಳು ಶ್ರೀಮಂತರು ಹಾಗೂ ಬಂಡವಾಳಶಾಹಿಗಳನ್ನು ಮಾತ್ರ ಕೇಂದ್ರಿಕರಿಸಿವೆ. ಜಿಎಸ್ ಟಿ ಜಾರಿಯನ್ನು ಕಾಂಗ್ರೆಸ್ ವಿರೋಧಿಸಿದ್ದ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಅದನ್ನು ಗಬ್ಬರ್ ಸಿಂಗ್ ತೆರಿಗೆ ಎಂದು ಕರೆದಿದ್ದರು. ಆದರೆ, ಬಿಜೆಪಿ ಅದನ್ನು ವ್ಯಾಪಕವಾಗಿ ಜಾರಿಗೆ ತಂದು, ಬಡವರ ಬದುಕಿನ ಜೊತೆ ಆಟವಾಡುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಒಂದು ಕಡೆ ಶ್ರೀಮಂತ ಉದ್ಯಮಿಗಳ ₹8 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಒಂದು ಕಡೆ ನಿರುದ್ಯೋಗ ಹೆಚ್ಚಾಗುತ್ತಿದೆ. ಯುವಜನರು ಉದ್ಯೋಗವಿಲ್ಲದೆ ಕಂಗಾಲಾಗಿದ್ದಾರೆ. ಕಳೆದ ಎಂಟು ವರ್ಷಗಳಲ್ಲಿ ದೇಶದ ಶೇ 30ರಷ್ಟು ಜನರು ಬಡತನದ ರೇಖೆಗಿಂತ ಕೆಳಕ್ಕೆ ಜಾರಿದ್ದಾರೆ‌. ಕೇಂದ್ರ ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಸರ್ವಾಧಿಕಾರಿ ಧೋರಣೆ ಹೊಂದಿದ್ದು, ಬಡವರ ವಿರೋಧಿಯಾಗಿದೆ ಎಂದು ಹೇಳಿದರು.

ADVERTISEMENT

ವರ್ಷದೊಳಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಬರುತ್ತಿದೆ. ಅದಕ್ಕಾಗಿ, ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಕೆಲಸವನ್ನು ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ. ಇದರ ಬಗ್ಗೆ ಕಾಂಗ್ರೆಸ್ ಸಂಘಟಿತವಾದ ಹೋರಾಟ ಮಾಡಲಿದೆ ಎಂದರು.

ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ‌ ಮಾತನಾಡಿ,‌ ಕೇಂದ್ರವು ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕಿರುಕುಳ‌ ನೀಡುತ್ತಿದೆ. ಇದನ್ನು‌ ಖಂಡಿಸಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಜುಲೈ 22ರಂದು‌ ಧಾರವಾಡದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿವರಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಅಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಪಕ್ಷದ ಮುಖಂಡರಾದ ಬಸವರಾಜ ಬೆಣಕಲ್ಲ ಹಾಗೂ ಸದಾನಂದ ಡಂಗನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.