ADVERTISEMENT

‘ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಸ್ಥಾನ’

ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್‌ ಭರವಸೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 13:57 IST
Last Updated 18 ಜನವರಿ 2024, 13:57 IST
ಹುಬ್ಬಳ್ಳಿಯ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್, ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮೆಹರವಾಡೆ, ಇತರರು ಉಪಸ್ಥಿತರಿದ್ದರು.
ಹುಬ್ಬಳ್ಳಿಯ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್, ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮೆಹರವಾಡೆ, ಇತರರು ಉಪಸ್ಥಿತರಿದ್ದರು.    

ಹುಬ್ಬಳ್ಳಿ: ವಿವಿಧ ನಿಗಮ ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನೂ ನೇಮಿಸಲು ನಿರ್ಧರಿಸಲಾಗಿದ್ದು, 10 ದಿನಗಳೊಳಗೆ ಅಂತಿಮಗೊಳಿಸಲಾಗುವುದು ಎಂದು ಬೆಳಗಾವಿ ವಿಭಾಗದ ಉಸ್ತುವಾರಿ, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್‌ ಹೇಳಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಕಾರ್ಯಕರ್ತರ ಸಭೆ ನಡೆಸಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಅವರಿಗೆ ಅಧಿಕಾರ ಹಾಗೂ ಜವಾಬ್ದಾರಿ ನೀಡಲು ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

‘ಕಾಡಾ, ಆರಾಧನಾ ಸಮಿತಿ, ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ನಿಗಮ ಮಂಡಳಿಗಳಿಗೆ ಸದ್ಯದಲ್ಲಿ  ಆಯ್ಕೆ ಮಾಡಲಾಗುವುದು. ಈ ಪ್ರಕ್ರಿಯೆ ಸರಾಗವಾಗಿ ನಡೆಯಲು ಪ್ರತಿ ಜಿಲ್ಲಾ ಮಟ್ಟದಲ್ಲಿ ಒಬ್ಬ ಕೋ–ಆರ್ಡಿನೇಟರ್‌  ಅವರನ್ನು ನೇಮಿಸಲು ಜಿಲ್ಲಾಧ್ಯಕ್ಷರಿಗೆ ಈಗಾಗಲೇ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.

ADVERTISEMENT

ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಹೇಗೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲಾಗಿದೆಯೋ ಅದೇ ರೀತಿ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ. ಇದಕ್ಕೆ ಪಕ್ಷದ ಎಲ್ಲ ಕಾರ್ಯಕರ್ತರು ಕೈಜೋಡಿಸಬೇಕು’ ಎಂದು ತಿಳಿಸಿದರು.

‘ಕಳೆದ 10 ವರ್ಷಗಳಲ್ಲಿ ಭ್ರಷ್ಟ ಕೇಂದ್ರ ಸರ್ಕಾರವನ್ನು ನೋಡಿ ಜನ ಬೇಸತ್ತಿದ್ದಾರೆ. ಬದಲಾವಣೆ ಬಯಸುತ್ತಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಸಿದ್ಧ. ದಕ್ಷಿಣ ಭಾರತದಿಂದ ಹೆಚ್ಚೆಚ್ಚು ಸಂಸದರನ್ನು ಲೋಕಸಭೆಗೆ ಕಳುಹಿಸಿಕೊಡೋಣ. ರಾಹುಲ್‌ ಗಾಂಧಿ ಪ್ರಧಾನಿಯಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮುಖಂಡರಾದ ಐ.ಜಿ. ಸನದಿ, ಮೆಹರವಾಡೆ, ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.