ADVERTISEMENT

ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ

ಶಾಸಕರ ಖರೀದಿ ಮಾಡಲು ಯತ್ನಿಸುತ್ತಿರುವ ಯಡಿಯೂರಪ್ಪ: ಕಾಂಗ್ರೆಸ್ ಆರೋಪ

​ಪ್ರಜಾವಾಣಿ ವಾರ್ತೆ
Published 17 ಜನವರಿ 2019, 13:02 IST
Last Updated 17 ಜನವರಿ 2019, 13:02 IST
ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಅತಂತ್ರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು– ಪ್ರಜಾವಾಣಿ ಚಿತ್ರ
ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಅತಂತ್ರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು– ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಶಾಸಕರ ಖರೀದಿ ಮಾಡಲು ಯತ್ನಿಸುತ್ತಿರುವ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಕಳೆದ ಚುನಾವಣೆಯಲ್ಲಿ ಜನರಿಂದ ತಿರಸ್ಕರಿಸಲ್ಪಟ್ಟಿರುವ ಬಿಜೆಪಿ, ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿಯಲು ಯತ್ನಿಸುತ್ತಿರುವುದು ಖಂಡನೀಯ. ಬಿಜೆಪಿ ಧೋರಣೆ ಬದಲಾಯಿಸಿಕೊಳ್ಳದಿದ್ದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹಿರಿಯ ಮುಖಂಡ ಅನ್ವರ್ ಮುಧೋಳ ಮಾತನಾಡಿ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್, ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರವನ್ನು ಬೀಳಿಸಲು ಕುತುಂತ್ರ ನಡೆಸಿದ್ದಾರೆ. ಹಣಕೊಟ್ಟು ಶಾಸಕರ ಖರೀದಿ ಮಾಡುವ ಪ್ರಯತ್ನ ಮುಂದುವರೆಸಿದ್ದಾರೆ. ಜನಾದೇಶಕ್ಕೆ ಅವರು ತಲೆಬಾಗಿ ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಬೇಕು ಎಂದರು.

ADVERTISEMENT

ರಾಜ್ಯದ ಬಹುತೇಕ ಜಿಲ್ಲೆಗಳು ಬರಗಾಲಕ್ಕೆ ತುತ್ತಾಗಿದ್ದು ಜನರು ತೊಂದರೆಗೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಸರ್ಕಾರದೊಂದಿಗೆ ಕೈಜೋಡಿಸುವ ಬದಲು ಅತಂತ್ರಗೊಳಿಸಲು ಯತ್ನಿಸುತ್ತಿದೆ. ಯಡಿಯೂರಪ್ಪ ಮತ್ತು ಡಿ.ವಿ. ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಇಂತಹ ಪ್ರಯತ್ನಗಳಿಗೆ ಕೈಹಾಕದೆ ಜನರ ಪರವಾಗಿ ಕೆಲಸ ಮಾಡಲು ಸಮ್ಮಿಶ್ರ ಸರ್ಕಾರಕ್ಕೆ ಅವಕಾಶ ನೀಡಬೇಕು ಎಂದು ಸದಾನಂದ ಡಂಗನವರ ಹೇಳಿದರು.

ಹುಬ್ಬಳ್ಳಿ– ಧಾರವಾಡ ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಮಾಜಿ ಸಂಸದ ಐ.ಜಿ. ಸನದಿ, ಮುಖಂಡರಾದ ನವೀದ್ ಮುಲ್ಲಾ, ಪ್ರಕಾಶ್ ಬುರ್‌ಬುರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.