ADVERTISEMENT

ಬಿಜೆಪಿಯಿಂದ ಸಾಂಸ್ಕೃತಿಕ ಭಯೋತ್ಪಾದನೆ: ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 2:23 IST
Last Updated 9 ಜೂನ್ 2022, 2:23 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಹುಬ್ಬಳ್ಳಿ: ‘ಸಾಂಸ್ಕೃತಿಕ ಭಯೋತ್ಪಾದನೆ ಮೂಲಕ ಬಿಜೆಪಿ ಜನರನ್ನು ಪ್ರಚೋದಿಸುತ್ತಿದೆ. ಪಠ್ಯಪುಸ್ತಕ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಅದನ್ನು ವ್ಯವಸ್ಥಿತವಾಗಿ ಮಾಡಲಾಗುತ್ತಿದೆ. ಇತಿಹಾಸವನ್ನು ತಿರುಚಲಾಗಿದೆ. ಮಕ್ಕಳ ಮನಸ್ಸಿನಲ್ಲಿ ದ್ವೇಷ ಬಿತ್ತಲಾಗುತ್ತಿದೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು, ‘ಪರಿಷತ್‌ ಚುನಾವಣೆಯಲ್ಲಿಕಾಂಗ್ರೆಸ್‌ ಅಭ್ಯರ್ಥಿ ಬಸವರಾಜ ಗುರಿಕಾರ ಗೆಲುವು ಸಾಧಿಸಲಿದ್ದಾರೆ. ಅವರಿಗೆ ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ’ ಎಂದರು.

‘ಸಿದ್ದರಾಮಯ್ಯ ಅವರಿಂದ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಿಲ್ಲ’ ಎಂಬ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಅವರಿಂದ ನಾನೂ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಿಲ್ಲ’ ಎಂದರು.

ADVERTISEMENT

ಪಿಎಸ್‌ಐ ಅಭ್ಯರ್ಥಿಗಳಿಂದ ಭೇಟಿ:ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪಿಎಸ್‌ಐ ಪರೀಕ್ಷೆ ಪಾಸಾದ ಅಭ್ಯರ್ಥಿಗಳು, ಹಗರಣದಲ್ಲಿ ನ್ಯಾಯಯುತವಾಗಿ ಪರೀಕ್ಷೆ ಬರೆದ ಪ್ರತಿಭಾವಂತರಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ‘ಪ್ರತಿಭಾವಂತ ಅಭ್ಯರ್ಥಿಗಳ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಮರುಪರೀಕ್ಷೆಗೆ ಮುಂದಾಗಿದ್ದು ಸರಿಯಲ್ಲ. ಅವರು ಏನೇ ಮಾಡಿದರೂ, ನಾವು ಹೋರಾಟ ಮಾಡುತ್ತೇವೆ. ಕಾನೂನು ಹೋರಾಟಕ್ಕೂ ಸಿದ್ದರಿದ್ದು, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.