
ಹುಬ್ಬಳ್ಳಿ: ‘ಧಾರವಾಡ ಜಿಲ್ಲೆಯ ಸಾರ್ವಜನಿಕ ಸಮಸ್ಯೆಗಳ ತ್ವರಿತ ಪರಿಹಾರ, ಶಿಕ್ಷಣದ ಗುಣಮಟ್ಟ ಹೆಚ್ಚಳ ಹಾಗೂ ಬೇಸಿಗೆ ನೀರಿನ ನಿರ್ವಹಣೆಗೆ ಜಿಲ್ಲಾಡಳಿತ ಸಮಗ್ರ ಕಾರ್ಯ ಯೋಜನೆ ರೂಪಿಸಿದೆ’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ತಾಲ್ಲೂಕು ಆಡಳಿತಸೌಧದಲ್ಲಿನ ಹುಬ್ಬಳ್ಳಿ ಶಹರ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಜನಸ್ನೇಹಿಯಾಗಿ ಮಾಡಲು ಕ್ರಮವಹಿಸಲಾಗಿದ್ದು, ಪ್ರತಿಯೊಂದು ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ’ ಎಂದರು.
‘ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ದೂರು ಸ್ವೀಕಾರ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ. ಸಾರ್ವಜನಿಕರ ದೂರುಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನರಿಂದ ಬಂದ ಮಾಹಿತಿಯ ಆಧಾರದ ಮೇಲೆ ಸ್ಥಳ ಪರಿಶೀಲನೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ’ ಎಂದು ತಿಳಿಸಿದರು.
‘ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ರ‍್ಯಾಂಕ್ ಗಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲೆ, ಕಾಲೇಜುಗಳಲ್ಲಿ ಹೆಚ್ಚುವರಿ ತರಗತಿ, ಮಾರ್ಗದರ್ಶನ ಶಿಬಿರ, ಪ್ರಶ್ನೆಪತ್ರಿಕೆ ಅಭ್ಯಾಸ ಹಾಗೂ ವಿಷಯ ತಜ್ಞರಿಂದ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕಳೆದ ಸಾಲಿನಲ್ಲಿ ಸಾಧಿಸಿದ ಸಾಧನೆಗಿಂತ ಹೆಚ್ಚಿನ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲಾಗುತ್ತದೆ. ರಾಜ್ಯ ಮಟ್ಟದಲ್ಲಿ ಉನ್ನತ ಸ್ಥಾನವನ್ನು ಧಾರವಾಡ ಜಿಲ್ಲೆ ಪಡೆದುಕೊಳ್ಳಲಿದೆ‘ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೀರಿನ ಸಮಸ್ಯೆ ಪರಿಹರಿಸಲು ಕ್ರಮ: ‘ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಚಿತವಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ, ನಗರಸಭೆ ಹಾಗೂ ನೀರು ಸರಬರಾಜು ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ನೀರಿನ ಮೂಲಗಳನ್ನು ಗುರುತಿಸಲಾಗುವುದು’ ಎಂದು ಹೇಳಿದರು.
‘ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮವಹಿಸಲಾಗುತ್ತದೆ. ಜಿಲ್ಲೆಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಕ್ಷಮತೆ ಕುರಿತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಕಾರ್ಯ ನಿರ್ವಹಿಸದ ಘಟಕಗಳನ್ನು ದುರಸ್ತಿ ಮಾಡಿ, ಜನರ ಬಳಕೆಗೆ ಅನುಕೂಲ ಮಾಡಿಕೊಡಲಾಗುವುದು’ ಎಂದು ತಿಳಿಸಿದರು.
ಬೀದಿ ನಾಯಿಗಳ ಸ್ಥಳಾಂತರಕ್ಕೆ ಚಿಂತನೆ: ‘ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ತರಲು ಸಮಗ್ರ ಸಮೀಕ್ಷೆ ನಡೆಸಲಾಗುತ್ತದೆ. ಬೀದಿ ನಾಯಿಗಳ ಸ್ಥಳಾಂತರಕ್ಕಾಗಿ ಜಾಗ ಗುರುತು ಮಾಡುವ ಕಾರ್ಯ ನಡೆದಿದೆ. ಬೇಬಿ ನಾಯಿಗಳ ರಕ್ಷಣೆ, ಲಸಿಕೆ ಹಾಗೂ ಅವುಗಳನ್ನೂ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವ ಯೋಜನೆ ರೂಪಿಸಲಾಗಿದೆ’ ಎಂದು ಹೇಳಿದರು.
‘ನಗರ ಪ್ರದೇಶಗಳಲ್ಲಿ ಒತ್ತುವರಿಯಾಗಿರುವ ಪಾದಚಾರಿ ಮಾರ್ಗ ತೆರವಿಗೆ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಕ್ರಮ ವಹಿಸಲಾಗುವುದು. ಧಾರವಾಡ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿಯವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅವುಗಳನ್ನು ತ್ವರಿತವಾಗಿ ಪರಿಹರಿಸುವಂತೆ ತಹಶೀಲ್ದಾರ್ ಮಹೇಶ ಗಸ್ತಿ ಅವರಿಗೆ ಸೂಚಿಸಿದರು.
ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ ಗಸ್ತೆ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಜೆ.ಬಿ.ಮಜ್ಜಗಿ, ಗ್ರೇಡ್ 2 ತಹಶೀಲ್ದಾರ್ ಶಿವಾನಂದ ಹೆಬ್ಬಳ್ಳಿ, ಕಂದಾಯ ನಿರೀಕ್ಷಕ ರವಿ ಬೆಣ್ಣೂರ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.
‘ಜಿಲ್ಲಾಡಳಿತದಿಂದ ಪ್ರತಿ ತಿಂಗಳು ಒಂದು ಬಾರಿ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಸ್ಥಳೀಯ ಜನಪ್ರತಿನಿಧಿ ಮತ್ತು ಸಾರ್ವಜನಿಕರೊಂದಿಗೆ ‘ಜನಸಂಪರ್ಕ’ ಸಭೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು. ಜಿಲ್ಲಾಡಳಿತವು ಜನರ ಸಮಸ್ಯೆಗಳಿಗೆ ಸ್ಪಂದಿಸಲಿದೆ’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.