ಹುಬ್ಬಳ್ಳಿ: ದೆಹಲಿಯಲ್ಲಿ ನಡೆದ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ–ಧಾರವಾಡ ಮಹಾನಗರದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.
ನಗರದ ಪ್ರಮುಖ ಸ್ಥಳಗಳಾದ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಉಪನಗರ ಸಾರಿಗೆ ನಿಲ್ದಾಣ, ಗೋಕುಲ ರಸ್ತೆ ಬಸ್ ನಿಲ್ದಾಣ, ಹೊಸೂರು ಬಸ್ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚನ್ನಮ್ಮ ವೃತ್ತ, ಡಾಕಪ್ಪ ವೃತ್ತ ಸೇರಿದಂತೆ ಪ್ರಮುಖ ಸ್ಥಳಗಳು ಹಾಗೂ ಧಾರ್ಮಿಕ ಸ್ಥಳಗಳ ಸುತ್ತಲು ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.
ನಗರ ಪ್ರವೇಶಿಸುವ ಪ್ರಮುಖ ರಸ್ತೆಗಳಲ್ಲಿ ಹಾಗೂ ಒಳರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ನಗರದ ರೈಲ್ವೆ ನಿಲ್ದಾಣದಲ್ಲಿ ಶ್ವಾನ ದಳ ಪ್ರಯಾಣಿಕರ ಸಾಮಗ್ರಿಗಳನ್ನು ಹಾಗೂ ರೈಲ್ವೆ ಆವರಣದ ಸುತ್ತಲೂ ಪರಿಶೀಲನೆ ನಡೆಸಿತು. ವಿಮಾನ ನಿಲ್ದಾಣದ ಸುತ್ತಮುತ್ತಲು ಸಹ ಬಾಂಬ್ ಪತ್ತೆ ದಳ ಹಾಗೂ ಕ್ಷಿಪ್ರ ಕಾರ್ಯಾಚರಣೆ ಸಿಬ್ಬಂದಿ ಪರಿಶೀಲನೆ ನಡೆಸಿದರು.
'ದೆಹಲಿ ಘಟನೆ ಹಿನ್ನೆಲೆಯಲ್ಲಿ ಅವಳಿನಗರದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಎರಡು ಚೆಕ್ ಪೋಸ್ಟ್ ಹಾಕಲಾಗಿದೆ. ಜಿಲ್ಲಾ ಗಡಿ ಪ್ರದೇಶದಲ್ಲಿ 20ಕ್ಕೂ ಹೆಚ್ಚು ಚೆಕ್ ಪೋಸ್ಟ್ ಹಾಕಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಭದ್ರತೆ ಕೈಗೊಂಡು, ನಿರಂತರವಾಗಿ ಪರಿಶೀಲನೆ ಮಾಡಲಾಗುತ್ತಿದೆ' ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.
‘ಸೂಕ್ಷ್ಮ ಸ್ಥಳಗಳಲ್ಲಿ ಹಾಗೂ ಜನಸಂದಣಿ ಇರುವಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸಿ, ನಿಗಾ ಇಡಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.