ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಬಾಣತಿಕಟ್ಟಿ ಢೋರ ಗಲ್ಲಿಯಲ್ಲಿ ಸಾಕಷ್ಟು ವರ್ಷಗಳಿಂದ ಚರ್ಮ ಹದ ಮಾಡುವ ಕಾಯಕ ಮಾಡಿಕೊಂಡು ಬಂದಿದ್ದೇವೆ. ಇದಕ್ಕೆ ಸಾರ್ವಜನಿಕರು ಬಲವಾಗಿ ವಿರೋಧಿಸುತ್ತಿದ್ದಾರೆ. ಆದ್ದರಿಂದ ಚರ್ಮ ಹದ ಮಾಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜ ಸಂಘದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.
ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಸಂತೋಷ ಸವಣೂರ ಮಾತನಾಡಿ ’ಚರ್ಮ ಹದ ಕಾಯಕ ನಮ್ಮ ಉಪಜೀವನಕ್ಕೆ ಆಧಾರವಾಗಿದೆ. ಇದನ್ನು ಬಿಟ್ಟು ಬೇರೆ ಕೆಲಸ ಮಾಡಲು ನಮಗೆ ಬರುವುದಿಲ್ಲ. ಆದರೆ ವಾಸನೆ ಬರುತ್ತದೆ ಎಂದು ಅಕ್ಕಪಕ್ಕದ ಬಡಾವಣೆಯವರು ಹೇಳುತ್ತಿರುವ ಕಾರಣ ಸಮಸ್ಯೆಯಾಗುತ್ತಿದೆ. ಆದ್ದರಿಂದ ಸರ್ಕಾರಿ ಜಮೀನು ಮಂಜೂರು ಮಾಡಿಕೊಡಬೇಕು’ ಎಂದು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ತಹಶೀಲ್ದಾರ್ ಕಚೇರಿ ಅಧಿಕಾರಿಗೆ ನೀಡಿದರು. ಮನವಿಯ ಪ್ರತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಸಲ್ಲಿಸಿದರು.
ಬಾಣತಿಕಟ್ಟಿ ಓಣಿಯ ಸಮಾಜದ ಅಧ್ಯಕ್ಷ ಸಂಜಯ ಕದಂ, ಘೋಡಕೆ ಓಣಿಯ ಸಮಾಜದ ಅಧ್ಯಕ್ಷ ಜಗನ್ನಾಥ ಸೋನೇನ, ಅರುಣ ಘೋಡಕೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.