ADVERTISEMENT

ಅಣ್ಣಿಗೇರಿ | ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಕೋನರಡ್ಡಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 14:47 IST
Last Updated 16 ಏಪ್ರಿಲ್ 2025, 14:47 IST
ಅಣ್ಣಿಗೇರಿ ಪಟ್ಟಣದ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶಾಸಕ ಎನ್.ಎಚ್.ಕೋನರಡ್ಡಿ ಉದ್ಘಾಟಿಸಿದರು
ಅಣ್ಣಿಗೇರಿ ಪಟ್ಟಣದ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶಾಸಕ ಎನ್.ಎಚ್.ಕೋನರಡ್ಡಿ ಉದ್ಘಾಟಿಸಿದರು   

ಅಣ್ಣಿಗೇರಿ: ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರ ಯಶಸ್ಸಿಗೆ ಪೋಷಕರು ಸಹಕಾರ ನೀಡುವಂತೆ ಶಾಸಕ ಎನ್.ಎಚ್.ಕೋನರಡ್ಡಿ ಸಲಹೆ ನೀಡಿದರು.

ಅವರು ಪಟ್ಟಣದ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪುರಸಭೆ ವತಿಯಿಂದ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಲು ಕಾನೂನು ಮತ್ತು ಸಂವಿಧಾನದಲ್ಲಿ ಹಕ್ಕುಗಳನ್ನು ನೀಡಲಾಗಿದೆ. ಪ್ರತಿಯೊಬ್ಬ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದ ಬದಲಾವಣೆಗೆ ಸಾಕ್ಷಿಯಾಗಬೇಕು ಎಂದರು.

ADVERTISEMENT

ಅಬಕಾರಿ ಇಲಾಖೆ ಅಧಿಕಾರಿ ಗೀತಾ ತೆಗ್ಯಾಳ ಮಾತನಾಡಿ, ಗಿರಿಜನ ಹಾಡಿಗಳ ಮಹಿಳೆಯರು ಮತ್ತು ಮಕ್ಕಳಿಗೆ ದೌರ್ಜನ್ಯಗಳ ವಿರುದ್ಧ ಹೋರಾಡುವ ಕಾನೂನು ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸರ್ಕಾರದ ವಿವಿಧ ಇಲಾಖೆ ವತಿಯಿಂದ ನೀಡುವ ಸವಲತ್ತುಗಳನ್ನು ಮಹಿಳೆಯರು ಸಮರ್ಪಕವಾಗಿ ಪಡೆದುಕೊಂಡು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಹೋರಾಡಲು ಸ್ವಯಂ ಸೇವಾ ಸಂಸ್ಥೆಗಳು ಕಾನೂನಾತ್ಮಕವಾಗಿ ಸಹಕಾರ ನೀಡುತ್ತಿವೆ. ಈಚಿನ ದಿನಗಳಲ್ಲಿ ಮಹಿಳೆ ಪುರುಷನಷ್ಟೇ ಸರಿ ಸಮಾನ ಸಾಧನೆ ಮಾಡುತ್ತಿರುವುದು ಶ್ಲಾಘನೀಯ. ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸರಿಸಮಾನ ಸಮಾಜ ನಿರ್ಮಿಸಲು ಎಲ್ಲರೂ ಸಹಕಾರ ನೀಡಬೇಕು ಎ೦ದರು.

ಇದೇ ವೇಳೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸಾವಿತ್ರಿಬಾಯಿ ಪೂಜಾರ ಅವರಿಂದ ಜನಪದ ಕಾರ್ಯಕ್ರಮ ಜರುಗಿತು. ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಮಹಿಳಾ ಅಭಿವೃದ್ಧಿ ಅಧಿಕಾರಿ ಕಾಂಚನಾ, ಸಿಡಿಪಿಒ ಗಾಯತ್ರಿದೇವಿ ಪಾಟೀಲ, ತಾ.ಪಂ ಇಒ ಭಾಗ್ಯಶ್ರೀ ಜಹಗೀರದಾರ, ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ, ಮಂಜುನಾಥ ಮಾಯನ್ನವರ, ಪ್ರೇಮಲತಾ ಬಾಲರಡ್ಡಿ ಹಾಗೂ ಅಂಗನವಾಡಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.