ADVERTISEMENT

ಇ– ಆಸ್ತಿ ಪರಿಹಾರಕ್ಕೆ ಕ್ರಮ: ಶಾಸಕ ಮಹೇಶ ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 5:23 IST
Last Updated 28 ನವೆಂಬರ್ 2025, 5:23 IST
ಹುಬ್ಬಳ್ಳಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು
ಹುಬ್ಬಳ್ಳಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು   

ಹುಬ್ಬಳ್ಳಿ: ‘ಎಲ್ಲ ಕೈಗಾರಿಕೋದ್ಯಮಿಗಳು ಇ–ಸ್ವತ್ತು ಸಮಸ್ಯೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.

ಇಲ್ಲಿನ ಗೋಕುಲ ರಸ್ತೆಯ ರವಿನಗರದ ಹೊಟೇಲ್ ಕ್ಲಾಸಿಕ್ ರೆಸಿಡೆನ್ಸಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಎಂಎಸ್‌ಎಂಇ ಕಾರ್ಯಕ್ಷಮತೆ ಹೆಚ್ಚಳ ಮತ್ತು  ಟಿಆರ್‌‌ಇಡಿಎಸ್ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಣ್ಣ ಮತ್ತು ದೊಡ್ಡ ಉದ್ಯಮಿಗಳು ವಾಣಿಜ್ಯ ತೆರಿಗೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಎಂಎಸ್‌ಎಂಇ ಯೋಜನೆ ಮತ್ತು ಕೈಗಾರಿಕೋದ್ಯಮ ಅಭಿವೃದ್ಧಿಯಲ್ಲಿ ದೇಶ ಬಹುದೊಡ್ಡ ಸಾಧನೆ ಮಾಡಿದೆ. ದೇಶದ ಜಿಡಿಪಿ ಸಹ ಏರಿಕೆಯಾಗಿದೆ’ ಎಂದರು. 

ADVERTISEMENT

‘ಪ್ರತಿಯೊಬ್ಬ ಕೈಗಾರಿಕೋದ್ಯಮಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಉಪಯೋಗಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಕಾಣಲು ಕಾರ್ಯಾಗಾರ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಣ್ಣ ಕೈಗಾರಿಕೆಗಳ ಸಂಘದ ಉಪಾಧ್ಯಕ್ಷ ನಿಂಗಣ್ಣ ಬಿರಾದಾರ, ‘ಈವರೆಗೆ ಬೇರೆ ಬೇರೆ ಜಿಲ್ಲೆಗಳಲ್ಲಿ 17 ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸಲಾಗಿದೆ’ ಎಂದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ್, ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರಮೇಶ ಪಾಟೀಲ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಎಚ್, ಗ್ರಾಮೀಣ ಜಂಟಿ ಕಾರ್ಯದರ್ಶಿ ದಿನೇಶ ಕುಮಾರ್, ಮಲ್ಲೇಶ ಜಾಡರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.